ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮಹಿಳೆ ಬಂಧನ
Views: 12
ಕನ್ನಡ ಕರಾವಳಿ ಸುದ್ದಿ: ಮಂಗಳೂರು ನಗರದಲ್ಲಿ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿದಲ್ಲಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿಯ ಗುರಿಂಗಾನ ನಿವಾಸಿ ನಸೀಮಾ (42 ) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಈಕೆಯ ಬಳಿ ಇದ್ದ ಸುಮಾರು 15,30,000 ರೂ. ಮೌಲ್ಯದ MDMA ಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನ.1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ಆರೋಪಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ ಎಂಬಾಕೆಯ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿ, ಪೂರೈಕೆಯ ಜಾಲದ ಬಗ್ಗೆ ತನಿಖೆಯನ್ನು ಕೈಗೊಂಡು, ಆರೋಪಿತೆಯು ವಾಸ್ತವ್ಯವಿದ್ದ ಪಂಪ್ ವೆಲ್ ಉಜ್ಜೋಡಿಯ ಹತ್ತಿರದ ನಿವಾಸದಲ್ಲಿ ಶೋಧ ನಡೆಸಿ ಸುಮಾರು 15,30,000 ರೂ. ಮೌಲ್ಯದ MDMA ವಶಪಡಿಸಿಕೊಂಡಿದ್ದಾರೆ.
ಆಕೆ ಮಂಗಳೂರು ನಗರದಾದ್ಯಂತ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದುದಾಗಿ, ವಿಚಾರಣೆಯ ವೇಳೆ ತಿಳಿದು ಬಂದಿರುತ್ತದೆ. ಆಕೆಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಈ ಪ್ರಕರಣದಲ್ಲಿ ಇನ್ನು ಕೆಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಪ್ರಕಟನೆ ತಿಳಿಸಿದೆ.






