ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್, ಶಿಂಧೆ ಡಿಸಿಎಂ ನಾಳೆ ಪ್ರಮಾಣ ವಚನ

Views: 19
ಮುಂಬೈ: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ
ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಶಾಸಕ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಯಿತು. ಮಹಾಯುತಿ ಒಕ್ಕೂಟದ ನಾಯಕರು ಇಂದು ಅಪರಾಹ್ನ 3.30ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ.
ಮುಂಬೈನ ವಿಧಾನ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು.
ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ 132 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತು, ಅದರ ಮಿತ್ರಪಕ್ಷಗಳಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿ ಉಳಿದ ಸ್ಥಾನಗಳನ್ನು ಪಡೆದುಕೊಂಡು ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.






