ಮಹೇಶ್ ಶೆಟ್ಟಿ ತಿಮರೋಡಿ ಸೇರಿ 7ಮಂದಿ ವಿರುದ್ದ ಪ್ರಕರಣ: ಸಹಜ ಸ್ಥಿತಿಯತ್ತ ಧರ್ಮಸ್ಥಳ

Views: 148
ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ಬುಧವಾರ ನಡೆದ ಅಹಿತಕರ ಘಟನೆಗಳ ಸಂಬಂಧ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ.
ಖಾಸಗಿ ವಾಹಿನಿಯೊಂದರ ವರದಿಗಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಹಾಗೂ ಜಯಂತ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಸುವರ್ಣ ನ್ಯೂಸ್ ವರದಿಗಾರರ ಮೇಲೆ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿ ಗಲಭೆಗೆ ಕಾರಣರಾಗಿದ್ದಾರೆಂದು ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ ಎಂಬವರು ಚಾನೆಲ್ ಸಂಪಾದಕ ಅಜಿತ್ ಹನುಮಕ್ಕನವರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಧರ್ಮಸ್ಥಳದಲ್ಲಿ ಪತ್ರಕರ್ತರು ಹಾಗೂ ಯೂಟ್ಯೂಬರ್‌ಗಳ ಮೇಲೆ ಹಲ್ಲೆಯಾಗಿದ್ದರೆ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಳ ರಸ್ತೆ ಬಳಿ ಸುಮಾರು 25 ರಿಂದ 50 ಜನರು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡ್ಡಿಪಡಿಸಿ ಪರಸ್ಪರ ಗಲಾಟೆ ನಡೆಸಿದ ಆರೋಪದಲ್ಲಿ ಧರ್ಮಸ್ಥಳ ಠಾಣೆಯ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಲ್ಲೆಗೊಳಗಾದವರಿಗೆ ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯ ಗಳಾಗಿರುವುದು ಕಂಡುಬಂದಿಲ್ಲ. ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳ್ತಂಗಡಿ ಠಾಣೆ ಪೊಲೀಸರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ದ.ಕ ಜಿಲ್ಲಾ ಎಸ್.ಪಿ ಅರುಣ್ ಕುಮಾರ್ ಪ್ರಕಟಣೆ ನೀಡಿದ್ದು, ಧರ್ಮಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತಿಯುತವಾಗಿದೆ ಎಂದು ತಿಳಿಸಿದ್ದಾರೆ.






