ರಾಜ್ಯದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ; ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ
Views: 213
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಬಂಗಾಳಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ಶ್ರೀಲಂಕಾದಲ್ಲಿ ಇಂದು ಬೆಳಗ್ಗೆ ಕಡಿಮೆ ಒತ್ತಡದ ಪ್ರದೇಶವು ಮುಂದುವರಿದಿತ್ತು. ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆಯೂ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಇದು ನಿಧಾನವಾಗಿ ಪಶ್ಚಿಮ-ವಾಯುವ್ಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಆಗ್ನೆಯ ಅರಬ್ಬಿ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ. ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ.18ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ.






