ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ; ರೆಡ್ ಅಲರ್ಟ್ ಘೋಷಣೆ!

Views: 125
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಚದುರಿದ ಭಾರೀ ಮಳೆಯು ಸಂಭವಿಸುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಬೀರುಗಾಳಿ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶನಿವಾರ ದಕ್ಷಿಣ ಕನ್ನಡ ಜಿಲ್ಲೆ ಪಣಂಬೂರು, ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಅತೀ ಹೆಚ್ಚು ಅಂದರೆ 5 ಸೆ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 4, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ ಮಳೆ ಸುರಿದಿದೆ.
ಮೀನುಗಾರರರಿಗೆ ಎಚ್ಚರಿಕೆ: 45 ರಿಂದ 55 ಕಿ.ಮೀ. ವೇಗದಲ್ಲಿ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ತೀವ್ರ ಗಾಳಿ ಬೀಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.






