ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Views: 27
ಕನ್ನಡ ಕರಾವಳಿ ಸುದ್ದಿ: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಎರಡು ದಿನಗಳ ಹಿಂದೆ ಇಕ್ಬಾಲ್ ಹುಸೇನ್ ಅವರಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ನಡೆಸಿದ ವಿವಿಧ ವೈದ್ಯಕೀಯ ಪರೀಕ್ಷೆಗಳಲ್ಲಿ ಹೃದಯದ ರಕ್ತನಾಳದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆ ಅವರಿಗೆ ಸ್ಟಂಟ್ ಅಳವಡಿಕೆ ಮಾಡಲಾಗಿದೆ.
ರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡ ನಂತರ ಅವರನ್ನು ತುರ್ತುವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ತಂಡ ಅಗತ್ಯ ಚಿಕಿತ್ಸೆ ನೀಡಿದೆ. ವೈದೇಹಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ. ವಿ.ಕೆ. ಶ್ರೀನಿವಾಸ್ ನೇತೃತ್ವದಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಶಾಸಕರ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಡಾ. ವಿ.ಕೆ. ಶ್ರೀನಿವಾಸ್, “ಇಕ್ಬಾಲ್ ಹುಸೇನ್ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ಸ್ಟಂಟ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿರಂತರ ಮೇಲ್ವಿಚಾರಣೆಯಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.
ವೈದ್ಯಕೀಯ ಪರೀಕ್ಷೆಗಳ ವರದಿಗಳನ್ನು ಆಧರಿಸಿ ಮುಂದಿನ ಚಿಕಿತ್ಸಾ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಹೃದಯದ ಸ್ಥಿತಿಯನ್ನು ಗಮನಿಸಿ ಅಗತ್ಯವಿದ್ದಲ್ಲಿ ನಾಳೆ ಅಥವಾ ನಾಡಿದ್ದು ಓಪನ್ ಹಾರ್ಟ್ ಸರ್ಜರಿ ನಡೆಸುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.






