ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ಸರಕಾರ ಪತನ: ಯತ್ನಾಳ್

Views: 47
ಕಲಬುರಗಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್ ಸರಕಾರ ಬಿದ್ದು ಹೋಗಲಿದೆ ಎಂದು ಬಿಜೆಪಿಯ ಫೈರ್ ಬ್ರ್ಯಾಂಡ್ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷದ ಬಹಳಷ್ಟು ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಗೊಂಡು ಒಂದು ವರ್ಷವಾದರೂ ಏನೂ ಅಭಿವೃದ್ಧಿ ಆಗಿಲ್ಲ. ಹೀಗಂತ ಖುದ್ದು ಕಾಂಗ್ರೆಸ್ ಶಾಸಕರೇ ಅಳಲು ತೋಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುದಾನ ಸಿಗದೆ ಶಾಸಕರು ಬೇಸತ್ತಿದ್ದಾರೆ. ಹೀಗಾಗಿ, ಅವರದೇ ಪಕ್ಷದವರ ಒಳಜಗಳದಿಂದ ಸರಕಾರ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯದಲ್ಲಿ ಒಕ್ಕಲಿಗರ ನಾಯಕರಾಗಲು ಕೆಲವರು ಮುಂದಾಗಿದ್ದಾರೆ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಇದೇ ವೇಳೆ ಯತ್ನಾಳ್ ಕೆಂಡಕಾರಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ನಾಗೇಂದ್ರ ಒಬ್ಬನೇ ಹಣ ತಿಂದಿಲ್ಲ. ಇದರಲ್ಲಿ ರಾಹುಲ್ ಗಾಂಧಿಯಿಂದ ಹಿಡಿದು ಪ್ರತಿಯೊಬ್ಬ ಕಾಂಗ್ರೆಸ್ ಮುಖಂಡರು ಹಣ ತಿಂದಿದ್ದಾರೆ. ಸುರ್ಜೆವಾಲಾ ಕಾಂಗ್ರೆಸ್ ಪಕ್ಷದ ಎಟಿಎಂ ಇದ್ದಂತೆ. ಈ ಗಿರಾಕಿ ಪ್ರತಿ ತಿಂಗಳು ಹಣ ವಸೂಲಿ ಮಾಡಲು ಬೆಂಗಳೂರಿಗೆ ಬರುತ್ತಾನೆ ಎಂದು ನೇರ ವಾಗ್ದಾಳಿ ನಡೆಸಿದರಲ್ಲದೆ, ರೂ.187 ಕೋಟಿ ಅಂದಾಜು ಮೊತ್ತದ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ತಾಕೀತು ಮಾಡಿದರು.
ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗುತ್ತಿಲ್ಲ. ಡಿಸಿಎಂ 25 ಪರ್ಸೆಂಟ್ ಕಾಮಗಾರಿಗಳನ್ನು ಇಟ್ಟುಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಾಕವಾಗಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ 40 ಪರ್ಸೆಂಟ್ ಕಮಿಷನ್ ನಡೆಯುತ್ತಿದೆ ಎಂದು ಅಪಪ್ರಚಾರ ಮಾಡಲಾಯಿತು. ಹಾಗೆಲ್ಲಾ 40 ಪರ್ಸೆಂಟ್ ತಿನ್ನೋಕೆ ಆಗೋದಿಲ್ಲ ಎಂದರಲ್ಲದೆ, ಹಾಗೊಂದು 40 ಪರ್ಸೆಂಟ್ ತಿನ್ನಬಹುದು ಎನ್ನುವುದಾದರೆ, ಈಗ ಕಾಂಗ್ರೆಸ್‍ನವರು 100 ಪರ್ಸೆಂಟ್ ಕಮಿಷನ್ ತಿನ್ನುತ್ತಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ ಎಂದರು.






