ಕರಾವಳಿ

ವಾಯುಭಾರ ಕುಸಿತ:ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ, ಮುನ್ಸೂಚನೆ 

Views: 65

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹ ಮಳೆಯ ಎಚ್ಚರಿಕೆ ನೀಡಿದ್ದು, ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶವು ಹವಾಮಾನ ಪರಿಸ್ಥಿತಿಗಳಿಗೆ ಕಾರಣವಾಗಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಿಗೆ ‘ಯೆಲ್ಲೋ’ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ವಾಯುಭಾರ ಕುಸಿತ ದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದೆ. ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಾರಾಂತ್ಯದವರೆಗೂ ಇದೇ ಪರಿಸ್ಥಿತಿ ಮುಂದುವರೆಯಲಿದೆ.

ಕೊಡಗು, ದಕ್ಷಿಣ ಕನ್ನಡ, ಹುಬ್ಬಳ್ಳಿ, ಧಾರವಾಡ , ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಸುತ್ತಮುತ್ತ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ಮತ್ತು ಕಡಬದಲ್ಲಿ ಸಂಜೆ ಭಾರಿ ಮಳೆ ಸುರಿಯಿತು. ಗದಗ ಜಿಲ್ಲೆಯ ಡಂಬಳದಲ್ಲಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ ಭಾಗದಲ್ಲಿ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದೆ.

Related Articles

Back to top button