ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ: ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ
Views: 34
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇಲ್ಲಿನ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪುರ ವಲಯ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟ 2026 -27 ಅಕ್ಟೋಬರ್ 23ರಂದು ಆಯೋಜಿಸಲಾಗಿತ್ತು,
ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಉನ್ನತ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿದ ವಿದ್ಯಾರಣ್ಯ ಶಿಕ್ಷಣ ಸಂಸ್ಥೆ ಕಳೆದ ಮೂರು ವರ್ಷಗಳಲ್ಲಿನ ಬೆಳವಣಿಗೆ ತೃಪ್ತಿ ನೀಡಿದೆ. ಈ ಮೂಲಕ ಬದ್ಧತೆ ಮತ್ತು ಉತ್ತಮ ಪ್ರಯತ್ನ ತೋರಿಸಿದ್ದಾರೆ.ಇದ್ದ ಮೂಲಭೂತ ಸೌಕರ್ಯಗಳಲ್ಲಿ ಸರ್ಕಾರಿ ಶಾಲೆಗಳು ತಾವು ಹೇಗೆ ಕಾರ್ಯಕ್ರಮ ಮಾಡಬಹುದು ಎಂಬುದನ್ನು ಈ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಉತ್ತಮ ಪ್ರತಿಭೆ ಇದೆ ತನ್ಮೂಲಕ ಸಾಧನೆ ಮಾಡಿ ಕೀರ್ತಿ ತನ್ನಿ ಎಂದರು.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಣ ಎನ್ನುವುದು ಕೇವಲ ವಿದ್ಯಾಭ್ಯಾಸಕ್ಕೆ ಮಾತ್ರ ಸೀಮಿತವಲ್ಲ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಶಿಕ್ಷಕರು ಮಕ್ಕಳ ಆಸಕ್ತಿಗೆ ಅನುಗುಣವಾಗಿ ತರಬೇತಿ ನೀಡಿದಾಗ ವಿದ್ಯಾರ್ಥಿಗಳ ಪ್ರತಿಭೆ ಇನ್ನಷ್ಟು ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದರು.
ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, ಕ್ರೀಡೆ ಕೇವಲ ಸೋಲು ಗೆಲುವಿನ ಲೆಕ್ಕಾಚಾರವಲ್ಲ ಅದು ಜೀವನ ಮೌಲ್ಯಗಳನ್ನು ರೂಪಿಸುವುದರೊಂದಿಗೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿ ಎಲ್ಲರ ಜೊತೆ ಉತ್ತಮ ಬಾಂಧವ್ಯ ಗಟ್ಟಿಗೊಳಿಸುತ್ತದೆ ಎಂದರು.
ಸಭಾ ಕಾರ್ಯಕ್ರಮ ಆರಂಭಕ್ಕೂ ಮೊದಲು ಆಕರ್ಷಕ ಪಥಸಂಚಲನೆ ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಎ. ಕಿರಣ್ ಕುಮಾರ್ ಕೊಡ್ಗಿ ಕ್ರೀಡಾ ಗೌರವ ವಂದನೆ ಸ್ವೀಕರಿಸಿದರು.
ಕುಂದಾಪುರ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕ್ಯಾನ ಮಕ್ಕಿ ಹರಿಪ್ರಸಾದ್ ಶೆಟ್ಟಿ ಕ್ರೀಡಾ ಜ್ಯೋತಿ ಪ್ರಜ್ವಲಿಸಿದರು.
ಉದ್ಯಮಿ ಅರುಣ್ ಕುಮಾರ್ ಹೆಗ್ಡೆ ಬಲೂನ್ ಹಾರಿಸಿ ಬಿಡುವುದರ ಮೂಲಕ ಕ್ರೀಡೆಗೆ ಚಾಲನೆ ನೀಡಿದರು.
ನಾಡಗೀತೆಯೊಂದಿಗೆ ಆರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಲಾಸ್ಯ ಮಧ್ಯಸ್ಥ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಇದೇ ಸಂದರ್ಭದಲ್ಲಿ ವಾಲಿಬಾಲ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀಹರಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗುತ್ತಿಗೆದಾರ ಅರುಣ್ ಕುಮಾರ್ ಹೆಗ್ಡೆ ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯಕ್, ಗುತ್ತಿಗೆದಾರ ಗಣೇಶ್ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಗ್ರೇಡ್-1 ಕುಸುಮಾರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗ್ರೇಡ್-2 ಕಿಶನ್ ರಾಜ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಕ್ವಾಡಿ ಬಾಲಕೃಷ್ಣ ಶೆಟ್ಟಿ, ಅಶೋಕ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉದಯ ಮಡಿವಾಳ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ರಂಜನ್ ಬಿ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಶಾಲೆಯ ಪ್ರಾಂಶುಪಾಲೆ ಅನಿತಾ ಕುಮಾರಿ, ಉಪ ಪ್ರಾಂಶುಪಾಲೆ ಸ್ಪೂರ್ತಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಫುಡ್ ಫೆಸ್ಟ್ ನ್ನು ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ, ಮಕ್ಕಳು ತಯಾರಿಸಿದ ಆಹಾರವನ್ನು ಸವಿದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ ಬಿಜಾಡಿ, ಉದಯಕುಮಾರ್, ರತ್ನಾಕರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಜತ್ ಭಟ್ ವಂದಿಸಿದರು.















