ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಎಲ್ಲಾ 11ಅಭ್ಯರ್ಥಿಗಳು ಅವಿರೋಧ ಆಯ್ಕೆ?

Views: 152

ಬೆಂಗಳೂರು: ಜೂ.ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂ.13 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನಿಂದ 7 ಬಿಜೆಪಿಯಿಂದ 3 ಹಾಗೂ ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದು, ಇವರೆಲ್ಲರು ಅವಿರೋಧವಾಗಿ ಆಯ್ಕೆಯಾಗುವುದು ಬಹತೇಕ ನಿಶ್ಚಿತವಾಗಿದೆ.

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದ್ದು, ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ 7 ಬಿಜೆಪಿಗೆ 3 ಹಾಗೂ ಜೆಡಿಎಸ್‌ಗೆ 1 ಸ್ಥಾನ ಗೆಲ್ಲಲು ಅವಕಾಶವಿದ್ದು, ಒಟ್ಟು 11 ಸ್ಥಾನಗಳಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಒಟ್ಟಾರೆ 11 ಅಭ್ಯರ್ಥಿಗಳು ಮಾತ್ರ ಕಣದಲ್ಲಿರುವುದರಿಂದ ಇವರೆಲ್ಲರ ಆಯ್ಕೆ ಅವಿರೋಧ ಆಯ್ಕೆ ಬಹುತೇಕ ಖಚಿತ.ಕಾಂಗ್ರೆಸ್ ಗೆಲ್ಲಲು ಅವಕಾಶ ಇರುವ 7ಸ್ಥಾನಗಳಿಗೆ ಮುಖ್ಯಮಂತ್ರಿ ಸಿದ್ದರಾಮ್ಯಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಣ್ಣ ನೀರಾವರಿ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಐವಾನ್ ಡಿಸೋಜ, ಬಲ್ಕೀಸ್ ಬಾನು, ಜಗದೇವ ಗುತ್ತೇದಾರ್, ವಸಂತಕುಮಾರ್ ಇವರುಗಳು ಇಂದು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ಸಲ್ಲಿಸಿದರು.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.

ಬಿಜೆಪಿಯಿಂದ ಯಾರು?

ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿಗೆ 3 ಸ್ಥಾನಗಳು ಗೆಲ್ಲಲು ಅವಕಾಶವಿದ್ದು, ಅದರಂತೆ 3ಸ್ಥಾನಗಳಿಗೆ ಮಾಜಿ ಸಚಿವ ಸಿ.ಟಿ. ರವಿ, ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ಮುಖ್ಯಸಚೇತಕ ರವಿಕುಮಾರ್, ಮಾಜಿ ಶಾಸಕ ಎಂ.ಜಿ. ಮುಳೆ ಇವರುಗಳು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಮುಖಂಡರುಗಳು ಉಪಸ್ಥಿತರಿದ್ದರು.

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಒಂದು ಸ್ಥಾನ ಗೆಲ್ಲಲು ಅವಕಾಶವಿದ್ದು, ಈ ಒಂದು ಸ್ಥಾನಕ್ಕೆ ಜವರಾಯಗೌಡ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.ವಿಧಾನಸೌಧದಲ್ಲಿಂದು ಬೆಳಿಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಜವರಾಯಗೌಡ ಅವರನ್ನು ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿಸುವ ನಿರ್ಧಾರ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

 

Related Articles

Back to top button
error: Content is protected !!