ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರ
Views: 110
ಕನ್ನಡ ಕರಾವಳಿ ಸುದ್ದಿ: ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಮರ ಕುಸಿದು ಭೀಕರ ದುರಂತ ಸಂಭವಿಸಿದ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದೆ.
ಅಪಘಾತದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ಬಸ್ ಒಳಗೆ ಸಿಲುಕಿದ್ದು, ಆತನನ್ನು ಸುರಕ್ಷಿತವಾಗಿ ಹೊರತೆಗೆದಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕ್ಷಣಾರ್ಧದಲ್ಲಿ ನಡೆದ ದುರಂತ ಚೆಂಬೂರ್‌ನ 11ನೇ ರಸ್ತೆಯಲ್ಲಿ ಸಾಗುತ್ತಿದ್ದ ಶಾಲಾ ಬಸ್ ಮೇಲೆ ಏಕಾಏಕಿ ಮರ ಉರುಳಿದೆ. ಮರದ ಭಾರದಿಂದ ಬಸ್‌ನ ಒಂದು ಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಮಕ್ಕಳು ತೀವ್ರ ಆತಂಕಕ್ಕೆ ಒಳಗಾದರು. ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದರು.
ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗಾಯಾಳು ಮಕ್ಕಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದರು. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ವಿಶೇಷ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.






