ಶಿರಾಡಿ ಘಾಟ್‌ನಲ್ಲಿ ಭೂಕುಸಿತ: ಕಾರು, ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ, ಭರದಿಂದ ರಕ್ಷಣಾ ಕಾರ್ಯಾಚರಣೆ

Views: 182
ಹಾಸನ: ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡು, ಕರಾವಳಿಯಲ್ಲಿ ಸೇರಿದಂತೆ ಹಲವು ಕಡೆ ಬಾರೀ ತೊಂದರೆ ಅನುಭವಿಸುವಂತಾಗಿದೆ.ಸತತ ಮಳೆಯಿಂದ ಶಿರಾಡಿ ಘಾಟಿಯ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎಂದು ತಿಳಿದುಬಂದಿದೆ.
ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದ್ದು, ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತಗೊಂಡಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆದು ನಿಲ್ಲಿಸುತ್ತಿದ್ದಾರೆ.






