ಸರಣಿ ಅಪಘಾತ ಮೂವರ ಸಾವು

Views: 46
ಸರಣಿ ಅಪಘಾತ ಮೂವರ ಸಾವು
ತುಮಕೂರು, ರಸ್ತೆಬದಿ ಪಂಕ್ಚರ್ ಆಗಿ ನಿಂತಿದ್ದ ಕ್ರೂಸರ್ ವಾಹನಕ್ಕೆ ಹಿಂಬದಿಯಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಗಂಗಾವತಿ ಮೂಲದ ಕ್ರೂಸರ್ ಚಾಲಕ ಶಂಕರ್ (35) ಹಾಗೂ ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಎಂಬುವರೇ ಮೃತಪಟ್ಟಿರುವ ದುರ್ದೈವಿಗಳು.ಪಡಿತರ ವಿತರಣಾ ಕೇಂದ್ರದ ಮಾಲೀಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಮಾರ್ಗಮಧ್ಯೆ ಕೋರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ವಾಹನದ ಹಿಂಬದಿಯ ಟೈಯರ್ ಪಂಚ್ಚರ್ ಆಗಿದೆ. ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅಪಘಾತದಲ್ಲಿ ಮೃತಪಟ್ಟಿರುವ ಶವಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸುವಲ್ಲಿ ಶ್ರಮಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಸಿಪಿಐ ಲಕ್ಷ್ಮೀಕಾಂತ್, ಪಿಎಸ್ಐ ಸಂಗಮೇಶ್ ಮೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಮಧ್ಯೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿನ್ನಸಂದ್ರ ಗೇಟ್ ಬಳಿ ಘಟನೆ ನಡೆದಿದೆ.
ಕೈವಾರ ಮೂಲದ ಇಲ್ಲು (40) ಮೃತಪಟ್ಟವರು, ಗಾಯಗೊಂಡಿರುವ ಮೂವರನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಅಪಘಾತದ ರಭಸಕ್ಕೆ ಮಿನಿ ಬಸ್ ನಜ್ಜುಗುಜ್ಜಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಚಿಂತಾಮಣಿ ಬೆಂಗಳೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.






