ಸಾಮಾಜಿಕ

ಸೆ.22 ರಿಂದ ಅ.7 ರವರೆಗೆ ರಾಜ್ಯದಲ್ಲಿ ಹೊಸದಾಗಿ ಜಾತಿಗಣತಿ ಸಮೀಕ್ಷೆ ನಿರ್ಧಾರ 

Views: 29

ಕನ್ನಡ ಕರಾವಳಿ ಸುದ್ದಿ: ಕಾಂತರಾಜ್ ಆಯೋಗವು 2015 ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ( ಜಾತಿ ಜನಗಣತಿ ) ರದ್ದುಗೊಳಿಸಿದ ಒಂದು ತಿಂಗಳ ನಂತರ, ಕರ್ನಾಟಕ ಸರ್ಕಾರವು ದಸರಾ ರಜಾದಿನಗಳಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಹೊಸದಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ

2014-15ರಲ್ಲಿ ನಡೆಸಿದ್ದ ಸಮೀಕ್ಷೆಯು ಹತ್ತು ವರ್ಷ ಹಳೆಯದಾಗಿದೆ ಹಾಗೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿಲ್ಲ. ಎಲ್ಲರ ಮನೆ ಬಾಗಿಲಿಗೂ ಹೋಗಿ ಸಮೀಕ್ಷೆ ನಡೆಸದೇ ಎಲ್ಲೋ ಕುಳಿತುಕೊಂಡು ಸಮೀಕ್ಷೆಯ ಅಂಕಿಅಂಶಗಳನ್ನು ದಾಖಲಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ರಾಜ್ಯದ ಪ್ರಭಾವಿ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿದ್ದಾರೆ ಎಂಬೆಲ್ಲಾ ಆರೋಪಗಳಿದ್ದವು. ಹೀಗಾಗಿ ಕಾಂಗ್ರೆಸ್ ಹೈಕಮ್ಯಾಂಡ್ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯಗೆ ಸೂಚಿಸಿತ್ತು. ಹೀಗಾಗಿ  ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಮತ್ತೊಮ್ಮೆ ಸಮೀಕ್ಷೆಗೆ ಮುಹೂರ್ತ ನಿಗದಿಪಡಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.

ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ.

ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.

ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related Articles

Back to top button
error: Content is protected !!