ಇತರೆ

ಹೊಸಕೋಟೆಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ, ಸ್ಥಳದಲ್ಲೇ 7 ಮಂದಿ ನಿಧನ

Views: 47

ಕನ್ನಡ ಕರಾವಳಿ ಸುದ್ದಿ:  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಕಾರು, ಟ್ಯಾಂಕರ್ ಮತ್ತು ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಎಂ.ಸತ್ಯಾವರ ಬಳಿ ಈ ದುರಂತ ನಡೆದಿದೆ, ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮೊದಲು ವೇಗವಾಗಿ ಬಂದ ಟ್ಯಾಂಕರ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ನ ಚಾಸಿ ಕಟ್ ಆಗಿದೆ. ಚಾಸಿ ತುಂಡಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್, ನೇರವಾಗಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಡಿಕ್ಕಿಯ ಹೊಡೆತ ಎಷ್ಟು ಭಯಂಕರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ 6 ಜನರು ಮತ್ತು ಬೈಕ್ ಸವಾರ ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು. ಕಾರಿನಲ್ಲಿದ್ದವರು ಕೋಲಾರ ಮೂಲದವರು ಎಂದು ತಿಳಿದುಬಂದಿದೆ. ಇವರು ಕೋಲಾರದಿಂದ ದೇವನಹಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗದಲ್ಲಿ ಹೋಗುವಾಗ ಎಂ.ಸತ್ಯಾವರ ಬಳಿ ಈ ದುರಂತ ಸಂಭವಿಸಿದೆ.

ವಿಷಯ ತಿಳಿದ ತಕ್ಷಣ ಹೊಸಕೋಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!