ಮುರುಘಾಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆ

Views: 20
ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಚಿತ್ರದುರ್ಗದ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಬಿಕೆ ಕೋಮಲಾ ಅವರು ಬೆಳಗ್ಗೆ ಮುರುಘಾ ಶ್ರೀಗಳ ವಿರುದ್ಧದ ಎರಡನೇ ಪೋಕ್ಸೊ ಪ್ರಕರಣದಲ್ಲಿ ಅವರಿಗೆ ಜಾಮೀನು ರಹಿತ ವಾರಂಟ್ ಹೊರಡಿಸಿದ್ದರು. ಮೊದಲ ಪೋಕ್ಸೋ ಪ್ರಕರಣದಲ್ಲಿ 5 ದಿನಗಳ ಹಿಂದೆ ಹೈಕೋರ್ಟ್ ನಿಂದ ಜಾಮೀನು ಪಡೆದು ದಾವಣಗೆರೆಯ ವಿರಕ್ತ ಮಠದಲ್ಲಿ ತಂಗಿದ್ದ ಮುರುಘಾ ಶ್ರೀಗಳನ್ನು ಬಂಧಿಸಿದ್ದ ಪೊಲೀಸರು ಚಿತ್ರದುರ್ಗಕ್ಕೆ ಕರೆತಂದು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಒಪ್ಪಿಸಿತ್ತು.
ಇದನ್ನು ಪ್ರಶ್ನಿಸಿ ಮುರುಘಾ ಶ್ರೀಗಳ ಪರ ವಕೀಲರು ಸಂಜೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠದ ಮುಂದೆ ವಾದಿಸಿದರು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ವಿಚಾರಣಾ ಕೋರ್ಟ್‌ಗೆ ಮುರುಘಾ ಶ್ರೀಗಳ ವಿರುದ್ಧ ಎನ್‌ಬಿಡಬ್ಲ್ಯೂ ಕೋರಿ ಮೆಮೊ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಯಾವುದೇ ಹೈಕೋರ್ಟ್ ಆದೇಶವಿಲ್ಲ ಎಂದು ತಿಳಿಸಲಾಗಿದೆ. ಇದು ಸಂವೇದನಾಶೀಲ ಪ್ರಕರಣವಾಗಿದೆ ಎಂಬ ಕಾರಣಕ್ಕೆ ನೀವು ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಗೋವಿಂದರಾಜ್ ಎನ್‌ಬಿಡಬ್ಲ್ಯೂಗೆ ತಡೆನೀಡಿ ಶ್ರೀಗಳ ಬಿಡುಗಡೆಗೆ ನಿರ್ದೇಶನ ನೀಡಿದರು.
ಅಷ್ಟೇ ಅಲ್ಲದೆ, 8-11-23ರ ಹೈಕೋರ್ಟ್ ಆದೇಶದ ಬಗ್ಗೆ ಎಸ್‌ಪಿಪಿಗೆ ತಿಳಿದಿಲ್ಲದಿರುವುದು ಆಶ್ಚರ್ಯಕರವಾಗಿದೆ. ಪ್ರಕರಣ ಪ್ರಮುಖ ಆರೋಪಿಯಾಗಿರುವ ಶ್ರೀಗಳು ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯವು ಸ್ಪಷ್ಟವಾಗಿ ಆದೇಶಿಸಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.
ಮುರುಘಾ ಶ್ರೀಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧವನ್ನು ವಿಧಿಸಿದರೆ. ಅದು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪ್ರಕ್ರಿಯೆಗಳಿಗೂ ಅನ್ವಯಿಸುತ್ತದೆ ಎಂದು ನಾನು ಪರಿಗಣಿಸುತ್ತೇನೆ. ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ವಿಚಾರಣಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.







