ರಾಜಕೀಯ

2024 ಲೋಕಸಭಾ ಚುನಾವಣೆ ಸಿದ್ಧತೆ/3.5 ಲಕ್ಷ ಸಿಬ್ಬಂದಿ ನಿಯೋಜನೆ/ಮಾರ್ಚ್ ಚುನಾವಣೆ ಘೋಷಣೆ/ಮೇ ನಲ್ಲಿ ಚುನಾವಣೆ !?

Views: 79

ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿ, ನಿರ್ದೇಶನಗಳ ಅನ್ವಯ ಚುನಾವಣಾ ತಯಾರಿಯಲ್ಲಿ ತೊಡಗಿದೆ. ಚುನಾವಣಾ ಆಯೋಗ ಚುನಾವಣಾ ಕಾರ್ಯದಲ್ಲಿ ತೊಡಗಿರುವ ಪ್ರಮುಖ ಅಧಿಕಾರಿಗಳ ವರ್ಗಾವಣೆ ಮಾಡದಂತೆ ಈಗಾಗಲೇ ಸರ್ಕಾರಕ್ಕೆ ಸೂಚನೆ ನೀಡಿದೆ.

3.5 ಲಕ್ಷ ಸಿಬ್ಬಂದಿ ನೇಮಕ; ರಾಜಕೀಯ ಪಕ್ಷಗಳ ಜೊತೆಗೆ ರಾಜ್ಯ ಚುನಾವಣಾ ಆಯೋಗ ಸಹ ಲೋಕಸಭೆ ಚುನಾವಣೆಯ ಮತದಾನದ ಸಿದ್ಧತೆಯನ್ನು ಆರಂಭಿಸಿದೆ. ಚುನಾವಣೆಗೆ ಮಾನವ ಸಂಪನ್ಮೂಲ ನಿಯೋಜನೆ ಪ್ರಮುಖ ಘಟ್ಟವಾಗಿದೆ.

ಮೂರುವರೆ ಲಕ್ಷಕ್ಕೂ ಅಧಿಕ ಸಿಬ್ಬಂದಿಗಳನ್ನು ಚುನಾವಣೆಯ ವಿವಿಧ ಕಾರ್ಯಗಳಿಗೆ ನಿಯೋಜನೆ ಮಾಡಲಾಗುತ್ತದೆ. ಅಧಿಕಾರಿ/ ಸಿಬ್ಬಂದಿಗಳಿಗೆ ತರಬೇತಿ ಸೇರಿದಂತೆ ವಿವಿಧ ಕಾರ್ಯಗಳು ಈಗಾಗಲೇ ಪ್ರಾರಂಭವಾಗಿವೆ.

ಫೆಬ್ರವರಿ ತಿಂಗಳಿನಲ್ಲಿ ಮಾನವ ಸಂಪನ್ಮೂಲ ನಿಯೋಜನೆ ಪೂರ್ಣಗೊಳ್ಳಲಿದ್ದು, ಚುನಾವಣಾ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳುವ ಶಿಕ್ಷಕರು, ಪೊಲೀಸರ ಸಂಖ್ಯೆ ಸಹ ಅಂತಿಮಗೊಳ್ಳಲಿದೆ. ಕರ್ನಾಟಕದಲ್ಲಿ ಒಂದೇ ಹಂತದಲ್ಲಿ 28 ಕ್ಷೇತ್ರದಲ್ಲೂ ಮತದಾನ ನಡೆಯುವ ನಿರೀಕ್ಷೆ ಇದೆ.

2019ರಲ್ಲಿ ಕೇಂದ್ರ ಚುನಾವಣಾ ಆಯೋಗ ಮಾರ್ಚ್ 10ರಂದು ಚುನಾವಣಾ ದಿನಾಂಕ ಘೋಷಣೆ ಮಾಡಿತ್ತು. ಏಪ್ರಿಲ್ 11 ರಿಂದ ಮೇ 19ರ ತನಕ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೇ 23ರಂದು ಮತ ಎಣಿಕೆ ನಡೆದಿತ್ತು. ಈ ಬಾರಿಯೂ ಮಾರ್ಚ್‌ನಲ್ಲೇ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಈ ಚುನಾವಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳನ್ನು ಲೋಕಸಭೆ ಚುನಾವಣೆಯಲ್ಲಿಯೂ ಬಳಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚುವರಿಯಾಗಿ ಇತರ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತದೆ, ಅವರಿಗೆ ತರಬೇತಿಯನ್ನು ಸಹ ನೀಡಲಾಗುತ್ತದೆ.

ಮತಗಟ್ಟೆ ಅಧಿಕಾರಿ, ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಪರೀಕ್ಷೆಗಳು ಪೂರ್ಣಗೊಂಡು ಫಲಿತಾಂಶ ಪ್ರಕಟವಾದ ಬಳಿಕ ಶಿಕ್ಷಕರು ಪೂರ್ಣ ಪ್ರಮಾಣದಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಚುನಾವಣಾ ಆಯೋಗದ ಅನುಮತಿ ಇಲ್ಲದೇ ವರ್ಗಾವಣೆ ಮಾಡುವಂತಿಲ್ಲ.

ತವರು ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಚುನಾವಣಾ ಆಯೋಗವೇ ವರ್ಗಾವಣೆ ಮಾಡುತ್ತದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ ಸಿಬ್ಬಂದಿಗಳ ಪಟ್ಟಿಯನ್ನು ಮೊದಲೇ ಸಿದ್ಧಗೊಳಿಸಿ ಅವರಿಗೆ ತರಬೇತಿಯನ್ನು ನಿಯೋಜನೆ ಮಾಡಲಾಗುತ್ತದೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಈಗಾಗಲೇ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಷ್ಕರಣೆ ಪೂರ್ಣಗೊಳಿಸಿದೆ. ಆದರೆ ಇನ್ನೂ ಸಹ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದ್ದು, ಪರಿಷ್ಕರಣೆ ನಡೆಯುತ್ತಲೇ ಇರುತ್ತದೆ.

Related Articles

Back to top button