ಜನಮನ

ವಿದ್ಯುತ್ ತಂತಿ ತುಳಿದು ತಾಯಿ, ಮಗು ಸಾವು: ಮಾನವ ಹಕ್ಕುಗಳ ಉಲ್ಲಂಘನೆ,ಸರ್ಕಾರಕ್ಕೆ ನೋಟಿಸ್

Views: 0

ಬೆಂಗಳೂರು: ಕಾಡುಗೋಡಿಯ ಹೋಪ್‌ ಫಾರ್ಮ್ ಬಳಿ ಪಾದಚಾರಿ ಮಾರ್ಗದಲ್ಲಿ ಹೋಗುವಾಗ ಬೆಸ್ಕಾಂ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತೀವ್ರ ಆಘಾತ ವ್ಯಕ್ತಪಡಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಮಾಧ್ಯಮಗಳ ವರದಿ ಪರಿಗಣಿಸಿ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರು ವಾರಗಳಲ್ಲಿ ಘಟನೆ ಬಗ್ಗೆ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ವರದಿ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.

ಈ ಘಟನೆಯನ್ನು ಗಮನಿಸಿದರೆ ಇಲ್ಲಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಬೆಸ್ಕಾಂ ಅಧಿಕಾರಿಗಳ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ತಾಯಿ–ಮಗು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ತೋರುತ್ತದೆ. ಸಿಬ್ಬಂದಿ, ಅಧಿಕಾರಿಗಳ ಮೇಲೆ ಏನು ಕ್ರಮ ಕೈಗೊಂಡಿರಿ? ಸಂತ್ರಸ್ತರಿಗೆ ಯಾವ ರೀತಿ ಪರಿಹಾರ ನೀಡಲಾಗಿದೆ? ಹಾಗೂ ಈ ರೀತಿಯ ಘಟನೆಗಳು ಪುನಃ ನಡೆಯದಂತೆ ಏನು ನಿಗಾ ವಹಿಸಲಾಗಿದೆ? ಎಂಬುದರ ಬಗ್ಗೆ ವಿವರ ನೀಡಿ ಎಂದು ಎನ್‌ಎಚ್‌ಆರ್‌ಸಿ ನೋಟಿಸ್‌ನಲ್ಲಿ ಕೇಳಿದೆ.

ನವೆಂಬರ್ 19 ರಂದು ಭಾನುವಾರ ನಸುಕಿನ ಜಾವ ನಡೆದಿದ್ದ ಈ ಮನಕಲುಕುವ ಘಟನೆ ಬಗ್ಗೆ ನಾಗರಿಕರು, ಬೆಸ್ಕಾಂ ಸೇರಿದಂತೆ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದರು.

 

Related Articles

Back to top button
error: Content is protected !!