ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಮೀಸಲಾತಿ: ಸಚಿವ ಸಂಪುಟ ನಿರ್ಧಾರ

Views: 0
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯಕವಿರುವ 449 ಹುದ್ದೆಗಳ ಸೇವೆಯನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಆಡಳಿತಾತ್ಮಕ ಅನುಮೋದನೆ ನೀಡಿರುವ ರಾಜ್ಯ ಸಚಿವ ಸಂಪುಟ ಸಭೆಯು, ಈ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ಇದೇ ಮೊದಲ ಬಾರಿಗೆ ಹೊರುಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಪದ್ಧತಿ ಅಳವಡಿಸಿಕೊಳ್ಳಲು ತೀರ್ಮಾನಿಸಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಕಾಲೇಜು ಶಿಕ್ಷಣ ಇಲಾಖೆ ಹಾಗೂ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯಕವಿರುವ 347 ಗ್ರೂಪ್-ಡಿ ನೌಕರರು ಮತ್ತು 102 ಡಾಟಾ ಎಂಟ್ರಿ ಆಪರೇಟರ್ ಗಳು ಸೇರಿದಂತೆ, ಒಟ್ಟು 449 ಹುದ್ದೆಗಳ ಸೇವೆಯನ್ನು ಅಂದಾಜು 11.30 ಕೋಟಿ ರೂ.ಗಳ ಮೊತ್ತದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜೊತೆಗೆ, ಈ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ರಾಜ್ಯದ ಮೀಸಲಾತಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ಹೇಳಿದರು.






