ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿಟಿ ರವಿ ಜೊತೆಗೆ ಮಧ್ವರಾಜ್ ಹೆಸರು ತೇಲಿಬಂದಿದೆ: ನಾನು ಆಕಾಂಕ್ಷಿ ಎಂದ ಶೋಭಾ!

Views: 4
ಉಡುಪಿ -ಚಿಕ್ಕಮಗಳೂರು 2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಈಗಾಗಲೇ ಆರಂಭಗೊಂಡಿದೆ. ಟಿಕೆಟ್ಗಾಗಿ ಲಾಭಿ, ಪಕ್ಷಾಂತರ, ಪ್ರಚಾರ, ಅಭ್ಯರ್ಥಿ ಆಯ್ಕೆ ಸದ್ದಿಲ್ಲದೇ ನಡೆಯುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಜಕೀಯ ಕಣ ರಂಗೇರಲಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎದುರು ಊಹಿಸಲಾಗದ ಸೋಲು ಕಂಡಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಎದುರು ನೋಡುತ್ತಿದ್ದು, ಈ ಬಾರಿ ಎಲ್ಲಾ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಸಜ್ಜಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೆಲುವಿನ ಹೆಸರಿನಲ್ಲಿ ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆ ಕಣಕ್ಕಿಳಿಯಲು ಮುಂದಾಗಿದ್ದು, ಈಗಾಗಲೇ ಗೆಲುವಿಗೆ ರಣತಂತ್ರ ರೂಪಿಸಲು ಆರಂಭಿಸಿದೆ.

ರಾಜ್ಯದ ಎಲ್ಲಾ ಕ್ಷೇತ್ರಗಳಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ಗಾಗಿ ಹಲವು ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ. ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಸಲು ಹೈಕಮಾಂಡ್ ಚಿಂತನೆ ನಡೆಸುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹೆಸರು ಕೇಳಿ ಬರುತ್ತಿದ್ದು, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕೂಡ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.
ಸಿ.ಟಿ ರವಿಯತ್ತ ಬಿಜೆಪಿ ಕಾರ್ಯಕರ್ತರ ಒಲವು
ಚಿಕ್ಕಮಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಗೆಲುವು ಸಾಧಿಸಿ ಸಚಿವರಾಗಿ, ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಸಿ.ಟಿ ರವಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಅವಧಿ ಕೂಡ ಮುಗಿದಿದ್ದು, ಸದ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ ರವಿ ಅಭ್ಯರ್ಥಿಯಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಕಾರ್ಯಕರ್ತರ ಅಪೇಕ್ಷಗೆ ಪ್ರತಿಕ್ರಯಿಸದ ಸಿ.ಟಿ ರವಿ ಮೌನವಾಗಿಗೆಯೇ ಒಪ್ಪಿಗೆ ನೀಡಿದ್ದರು.

ಇನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಳೆದ ಎರಡು ತಿಂಗಳಿಂದ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗುತ್ತಿರುವ ಪ್ರಮೋದ್ ಮಧ್ವರಾಜ್ ಬಿಜೆಪಿ ಕಾರ್ಯಕರ್ತರ ಜೊತೆ ಬೆರೆಯುತ್ತಿದ್ದಾರೆ. ಈ ಮೂಲಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಆಕಾಂಕ್ಷಿ ಎನ್ನುವುದನ್ನು ಬಿಂಬಿಸುತ್ತಿದ್ದಾರೆ. ಇವರ ಜೊತೆಗೆ ಡಿ.ಎನ್.ಜೀವರಾಜ್ ಕೂಡ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಎಲ್ಲರಿಗಿಂತ ಮುಖ್ಯವಾಗಿ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಾರಿಯೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಭಾಗಿಯಾಗುತ್ತಿರುವ ಶೋಭಾ ಕರಂದ್ಲಾಜೆ ಈ ಬಾರಿಯೂ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
ದತ್ತ ಜಯಂತಿ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿರುವ ಶೋಭಾ ಕರಂದ್ಲಾಜೆ ಇತ್ತೀಚಿಗೆ ನಡೆದ ಶೋಭಾ ಯಾತ್ರೆಯ ವೇಳೆ ಉಡುಪಿ-ಚಿಕ್ಕಮಗಳೂರಿನಿಂದ ಮತ್ತೆ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ದತ್ತ ಜಯಂತಿಯ ಶೋಭಾ ಯಾತ್ರೆಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ”ಕ್ಷೇತ್ರದ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಹಣ ತಂದಿದ್ದೇನೆ. ನನ್ನ ಪ್ರಯತ್ನದ ಫಲವಾಗಿ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಎರಡು ಕೇಂದ್ರೀಯ ವಿದ್ಯಾಲಯ ಶಾಲೆಗಳನ್ನು ಸ್ಥಾಪಿಸಲಾಗಿದೆ. ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಕಾಲೇಜುಗಳಿಗೆ ಮೂಲಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಜಿಲ್ಲೆಯಲ್ಲಿ ರಸ್ತೆ, ರೈಲ್ವೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ” ಎನ್ನುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗುತ್ತಿರುವ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತೊಂದು ಕ್ಷೇತ್ರದಿಂದ ಸಹ ಅವಕಾಶವಿದೆ. ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸುತ್ತಿದೆ ಎನ್ನುವ ಮಾತುಗಳು ರಾಜಕೀಯ ಒಲಯದಲ್ಲಿ ಕೇಳಿಬರುತ್ತಿವೆ.
ಶೋಭಾ ಕರಂದ್ಲಾಜೆ ಅವರನ್ನು ಮತ್ತೆ ಒಪ್ಪಿಕೊಳ್ಳುತ್ತಾರಾ ಉಡುಪಿ-ಚಿಕ್ಕಮಗಳೂರು ಜನ!?
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ಸಿ.ಟಿ ರವಿ ಹಾಗೂ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಪರಿಗಣಿಸಬೇಕು ಎನ್ನುವ ಆಗ್ರಹಗಳು ಮತದಾರರ ಒಲಯದಲ್ಲಿ ಕೇಳಿ ಬರುತ್ತಿದೆ. ಯಾಕೆಂದರೆ ಸಿ.ಟಿ ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಾಬಲ್ಯತೆ ಹೊಂದಿದ್ದರೆ, ಪ್ರಮೋದ್ ಮಧ್ವರಾಜ್ ಉಡುಪಿ ಜಿಲ್ಲೆಯಲ್ಲಿ ಹಿಡಿತ ಸಾಧಿಸಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಬಗ್ಗೆ ಮತದಾರರಲ್ಲಿ ಅಸಮಾಧಾನವಿದೆ.
ಕೊರೊನಾದಂತಹ ಸಂಕಷ್ಟದಲ್ಲಿ ಸಮಯದಲ್ಲಿ ಕ್ಷೇತ್ರದ ಜನರನ್ನು ಮರೆತ ಶೋಭಾ ಕರಂದ್ಲಾಜೆ ಬೆಂಗಳೂರಿನಲ್ಲಿ ಫುಟ್ ಕಿಟ್ ವಿತರಣೆ ಮಾಡಿದ್ದರು, ಇಷ್ಟೇ ಅಲ್ಲದೇ ಚುನಾವಣೆ ಸಂದರ್ಭ ಹೊರತು ಪಡಿಸಿ ಬೇರೆ ಸಮಯದಲ್ಲಿ ಕ್ಷೇತ್ರಗಳಿಗೆ ಭೇಟಿ ನೀಡುವುದಿಲ್ಲ ಎನ್ನುವ ಅಸಮಾಧಾನ ಕ್ಷೇತ್ರದ ಜನರಲ್ಲಿದೆ
ಕಾಂಗ್ರೆಸ್ ನಲ್ಲಿ ಈಗಾಗಲೆ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರ ಹೆಸರನ್ನು ಈಗಾಗಲೇ ಹೈಕಮಾಂಡ್ ಗೆ ಕಳುಹಿಸಲಾಗಿದೆ.ಅವರನ್ನೇ ಪೈನಲ್ ಮಾಡುವ ನಿರೀಕ್ಷೆಯಿದೆ






