ರಾಜ್ಯದಲ್ಲಿ ಸಾವಿರ ಗಡಿ ಮುಟ್ಟಿದ ಕೊರೊನಾ ಸೋಂಕಿತರ ಸಂಖ್ಯೆ!

Views: 31
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 1 ಸಾವಿರ ಗಡಿ ಮುಟ್ಟಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 229 ಕೊರೊನಾ ಪಾಸಿಟಿವ್ ಪ್ರಕರಣಗಳ ವರದಿಯಾಗಿದ್ದು, 62 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾದ್ಯಂತ 3527 ಮಂದಿಗೆ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 229 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಕೋವಿಡ್ ಪಾಸಿಟಿವಿಟಿ ದರ 6.49 ದಾಖಲಾಗಿದ್ದು, ಮರಣ ಪ್ರಮಾಣ ದರ ಶೂನ್ಯವಿದೆ. ಒಟ್ಟು 1000 ಸಕ್ರಿಯ ಪ್ರಕರಣಗಳಲ್ಲಿ 943 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದಾರೆ. 57 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 22 ಮಂದಿ ಐಸಿಯುನಲ್ಲಿದ್ದಾರೆ.
ಕೋವಿಡ್ ಮಾರ್ಗಸೂಚಿ ಅನುಷ್ಠಾನದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ?
ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ ಇಲ್ಲದಿದ್ದರೂ ಜಾಗೃತಿ ಮೂಡಿಸುವಂತೆ ಆರೋಗ್ಯ ಇಲಾಖೆ ಬಿಬಿಎಂಪಿಗೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತೀಚೆಗೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದರು. ಆದರೆ, ಕೋವಿಡ್ ನಿಯಮಾವಳಿ ಅನುಷ್ಠಾನದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಹೊಸ ವರ್ಷಾಚರಣೆ ವೇಳೆ ಅತಿ ಹೆಚ್ಚು ಜನದಟ್ಟಣೆ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಹೇಳಿತ್ತು. ಬ್ರಿಗೇಡ್ ರೋಡ್, MG ರೋಡ್, ಚರ್ಚ್ ಸ್ಟ್ರೀಟ್ ಗಳಲ್ಲಿ ಮಾಸ್ಕ್ ಹಾಕದೆ ಬಹುತೇಕ ಜನರು ಓಡಾಡುತ್ತಿದ್ದಾರೆ. ಆದರೆ, ಬಿಬಿಎಂಪಿ ವತಿಯಿಂದ ಕನಿಷ್ಠ ಜಾಗೃತಿ ಮೂಡಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಸೀಮಿತ ಜನದಟ್ಟಣೆ ಪ್ರದೇಶಗಳಲ್ಲಿ ಮಾರ್ಷಲ್ಗಳ ನೇಮಿಸಿ ಜಾಗೃತಿ ಮೂಡಿಸಲು ಬಿಬಿಎಂಪಿ ವಿಫಲವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ.