ನಾಳೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

Views: 71
ಶಿವಮೊಗ್ಗ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನಾಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾಳೆ ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ನಡೆಸಿ ಉಮೇದುವಾರಿಕೆ ಸಲ್ಲಿಸುವುದಾಗಿ ಹೇಳಿದರು.
ಸಾಮಾನ್ಯ ಕಾರ್ಯಕರ್ತ ಮತದಾರರೇ ತಮಗೆ ಸ್ಟಾರ್ ಪ್ರಚಾರಕರು. ಬಿಜೆಪಿ ಶುದ್ಧೀಕರಣ ಆಗಬೇಕಾಗಿದ್ದು, ಅದಕ್ಕಾಗಿಯೇ ಹೊರಗೆ ಹೋರಾಟ ಮಾಡುತ್ತಿದ್ದೇನೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಪ್ರವಾಸ ಪೂರ್ಣಗೊಳಿಸಿದ್ದೇನೆ. ಅತಿ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಹಿಂದುತ್ವವಾದಿಯಾಗಿರುವ ತಮಗೆ ಬೆಂಬಲ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ನೇರವಾಗಿ ತಮಗೆ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಕೂಡ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದುರ್ಬಲರಾಗಿದ್ದಾರೆ. ಅದಕ್ಕಾಗಿ ತಮಗೆ ಬೆಂಬಲ ಕೊಡುವುದಾಗಿ ಹೇಳುತ್ತಿದ್ದಾರೆ. ನಾಳೆ ಎಲ್ಲರೂ ನಾಮಪತ್ರ ಸಲ್ಲಿಸುವ ವೇಳೆ ಬರುತ್ತಿದ್ದಾರೆ. ಆದರೆ ಇಷ್ಟೊಂದು ಬೆಂಬಲ ಸಿಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ತಮ್ಮ ಅಭಿಮಾನಿಗಳು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದ್ದಾರೆ. ಸೋಲಿನ ಭಯದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಅಪಪ್ರಚಾರಕ್ಕೆ ಕಾರ್ಯಕರ್ತರು ಕಿವಿಗೊಡಬಾರದು. ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ. ತಮ್ಮ ವಿರುದ್ಧ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.






