ಮಹಿಳೆಯ ಅಪಹರಣ ಪ್ರಕರಣ:ಮಾಜಿ ಸಚಿವ ಹೆಚ್ ಡಿ ರೇವಣ್ಣ ಬಂಧನ

Views: 114
ಮೈಸೂರಿನಲ್ಲಿ ದಾಖಲಾಗಿರುವ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದು, ರೇವಣ್ಣ ಅವರನ್ನು ಬೆಂಗಳೂರು ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಿವಾಸದಿಂದ ಎಸ್ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಲು ಎಸ್ ಐಟಿ ರೇವಣ್ಣಗೆ ನೊಟೀಸ್ ಜಾರಿ ಮಾಡಿತ್ತು ಆದರೆ ವಿಚಾರಣೆಗೆ ರೇವಣ್ಣ ಗೈರು ಹಾಜರಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಪಹರಣಕ್ಕೀಡಾಗಿದ್ದ ಮನೆ ಕೆಲಸದಾಕೆಯನ್ನು SIT ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಮಹಿಳೆ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ರೇವಣ್ಣರ ಪಿಎ ರಾಜಶೇಖರ ಎಂಬುವರ ತೋಟದ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ಪ್ರಕರಣದ ಸಂಬಂಧ ಎಸ್ ಐಟಿ ಪೊಲೀಸರು ಹೆಚ್. ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು. ರೇವಣ್ಣ ಅವರ ನಿವಾಸದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಲಾಯಿತು. ಈ ಮಧ್ಯೆ, ಲೈಂಗಿಕ ಕಿರುಕುಳ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ. ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.






