ಮುಂಬರುವ ಬಿಬಿಎಂಪಿ, ಜಿ.ಪಂ., ತಾ.ಪಂ.ಚುನಾವಣೆಗೆ ಕಾಂಗ್ರೆಸ್ ತಯಾರಿ

Views: 48
ಬೆಂಗಳೂರು:ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಬಗ್ಗೆ, ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ತರ ವಿಚಾರಗಳ ಬಗ್ಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕ ಕ್ರಿಯಾ ಯೋಜನೆಯನ್ನು ರೂಪಿಸುವ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದೆ.
ಹಾಗೆಯೇ ಲೋಕಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಗೆ ಕಾರಣಗಳನ್ನು ಅರಿಯಲು ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಯಾವ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ಹಿನ್ನಡೆಗೆ ಕಾರಣವಾಗಿರುವ ಅಂಶಗಳನ್ನು ಈ ವಲಯವಾರು ಸತ್ಯ ಶೋಧನಾ ಸಮಿತಿ ಪತ್ತೆ ಹಚ್ಚಿ ವರದಿ ನೀಡಲಿದೆ. ಈ ವರದಿ ಆಧರಿಸಿ ಪಕ್ಷವನ್ನು ಸಂಘಟಿಸುವ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ.
ಮುಂಬರುವ ಬಿಬಿಎಂಪಿ, ಜಿ.ಪಂ., ತಾ.ಪಂ. ಚುನಾವಣೆಗೆ ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಲನ ಸಮಿತಿಗಳನ್ನು ರಚಿಸಿ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸಜ್ಜುಗೊಳಿಸಲು ಏನೆಲ್ಲಾ ತಯಾರಿ ಮಾಡಬೇಕು, ಚುನಾವಣೆಯ ನೀಲ ನಕ್ಷೆ ಹೇಗಿರಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬೂತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿ ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ವಲಯವಾರು ವರದಿ ನೀಡುವಂತೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಸೂಚನೆ ನೀಡಿದರು.
ಮುಂಬರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಚನ್ನಪಟ್ಟಣ, ಸಂಡೂರು. ಶಿಗ್ಗಾವ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಚಿವರು ಹಾಗೂ ಶಾಸಕರುಗಳನ್ನು ನಿಯೋಜನೆ ಮಾಡಿ ಈಗಿನಿಂದಲೇ ಉಪಚುನಾವಣೆಯ ಗೆಲುವಿಗೆ ಎಲ್ಲಾ ಸಿದ್ದತೆಗಳನ್ನು ನಡೆಸಲು ಸಭೆಯಲ್ಲಿ ಚರ್ಚಿಸಲಾಗಿದೆ.






