ಮುಂಗಾರು ಮಳೆ ಮತ್ತಷ್ಟು ರಭಸ :ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ

Views: 125
ಬೆಂಗಳೂರು :ಕರಾವಳಿ ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ರಭಸ ಪಡೆದಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ರೆಡ್ ಅಲರ್ಟ್ ನೀಡಲಾಗಿದೆ.
ಇಂದೂ ಸೇರಿದಂತೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಲಾಗಿದೆ.ಜುಲೈ 15 ಮತ್ತು 16 ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ 30 ರಿಂದ 40 ಕಿಲೋಮೀಟರ್ ಪ್ರತಿ ಗಂಟೆಗೆ ಗಾಳಿ ಬೀಸಲಿದ್ದು, ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನಿರಂತರ ಗಾಳಿ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್ ಪುವಿಯರಸನ್ ಹೇಳಿದ್ದಾರೆ.






