ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ.!

Views: 324
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗಕ್ಕೆ ಇಂದು ಆರೆಂಜ್, ನಾಳೆ ಯೆಲ್ಲೋ, ಚಿಕ್ಕಮಗಳೂರು ಜಿಲ್ಲೆಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ.ಗೆ ತಲುಪಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಹೆಚ್ಚು ಮಳೆ ಸುರಿಯಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
”ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್ ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್‌ನ ಮೂಲಕ ಮಧ್ಯ ಕೇರಳದ ಕರಾವಳಿಯವರೆಗೆ ಹಾದು ಹೋಗುತ್ತಿದೆ. ಅದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ” ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ತಿಳಿಸಿದ್ದಾರೆ.