ರಾಜಕೀಯ

ಸಿದ್ದರಾಮಯ್ಯಗೆ ಸಂಕಷ್ಟ, ಕಾನೂನು ತಜ್ಞರ ಜತೆ ಸಮಾಲೋಚನೆ

Views: 146

ಬೆಂಗಳೂರು,:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಕುಣಿಕೆಗೆ ಸಿಲುಕಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ರಾಜಕೀಯ ವಿಪ್ಲವಗಳಿಗೆ ಕಾರಣವಾಗುವ ಜತೆಗೆ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷಕ್ಕೂ ಎಡೆಮಾಡಿಕೊಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್‌ನ್ನು ವಾಪಸ್ ಪಡೆಯಬೇಕು ಎಂದು ಕಳೆದ ಆಗಸ್ಟ್ 1 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು ಅದನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಇಷ್ಟಾದರೂ ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನ್ನು ಪರಿಗಣಿಸದೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಬಗ್ಗೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲರ ಕಚೇರಿಯಿಂದ ಪತ್ರ ರವಾನಿಸಲಾಗಿದೆ.

ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭಾಕರ್ ಅವರು ರಾಜ್ಯಪಾಲರ ಸೂಚನೆಯಂತೆ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರಮುಖೇನ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದ ಜತೆ ಅನುಮತಿಗೆ ಪರಿಗಣಿಸಿರುವ ಅಂಶಗಳ 6 ಪುಟಗಳ ಪತ್ರವನ್ನು ಲಗ್ಗತ್ತಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988 ಸೆಕ್ಷನ್ 17ರಡಿ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 218ರಡಿಯಲ್ಲಿ ವಿಚಾರಣೆಗೆ ಅನುಮತಿ ನೀಡಿರುವುದನ್ನು ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ಅವರು ಕಾನೂನು ಉರುಳಿಗೆ ಸಿಲುಕಿದಂತಾಗಿದ್ದು, ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಂತಾಗಿದ್ದು, ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿ ಎಫ್‌ಐಆರ್‌ನ್ನು ದಾಖಲಿಸಬಹುದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿ ನಿಂತು ಪ್ರಕರಣ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪತ್ನಿಗೆ ನೀಡಿರುವ 18ನಿವೇಶನಗಳಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ, ಪ್ರದೀಪ್‌ಕುಮಾರ್ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ಅವರಿಗೆಮನವಿ ಮಾಡಿದ್ದರು.

ಈ ದೂರನ್ನಾಧರಿಸಿ ರಾಜ್ಯಪಾಲರು ಸಿದ್ದರಾಮಯ್ಯರವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ನಿಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಯಾಕೆ ಅನುಮತಿ ನೀಡಬಾರದು ಎಂದು ನೋಟಿಸ್‌ನಲ್ಲಿ ಹೇಳಿದ್ದರು.ಈ ನೋಟಿಸ್‌ಗೆ ಮುಖ್ಯಮಂತ್ರಿಗಳು ಸುದೀರ್ಘ ಉತ್ತರ ನೀಡಿದ್ದರು. ಇಷ್ಟೆಲ್ಲ ಬೆಳವಣಿಗೆಗಳ ನಡುವೆಯೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಹಾಗಾಗಿ,ಮುಖ್ಯಮಂತ್ರಿಗಳು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಾನೂನು ಸಮರ:ಸಿಎಂ ಚರ್ಚೆ

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನದ ವಿರುದ್ಧ ಕಾನೂನು ಹೋರಾಟನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ರಾಜ್ಯಪಾಲರ ತೀರ್ಮಾನದ ಬಗ್ಗೆ ಯಾವ ರೀತಿ ಮುಂದಿನ ಹೆಜ್ಜೆಗಳನ್ನು ಇಡಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದಾರೆ.

ರಾಜ್ಯಪಾಲರ ತೀರ್ಮಾನ ಆಡಳಿತಾರೂಢ ಕಾಂಗ್ರೆಸ್‌ಗೆ ಒಂದು ರೀತಿ ಆಘಾತ ತಂದಿದ್ದು, ರಾಜ್ಯಪಾಲರ ನಡೆ ಬಗ್ಗೆ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬೆನ್ನಿಗೆ ನಿಂತಿರುವ ಸಚಿವ ಸಂಪುಟದ ಸಚಿವರುಗಳು ರಾಜ್ಯಪಾಲರ ತೀರ್ಮಾನ ಹೊರ ಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧಿಕೃತ ನಿವಾಸ ಕಾವೇರಿಯತ್ತ ದೌಡಾಯಿಸಿದ್ದು, ಸಚಿವರುಗಳೊಂದಿಗೂ ಮುಖ್ಯಮಂತ್ರಿಗಳು ಮುಂದಿನ ನಡೆ ಬಗ್ಗೆ ಸಮಾಲೋಚನೆ ನಡೆಸಿದರು.

ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಸೇರಿದಂತೆ ಸಚಿವಸಂಪುಟದ ಸರ್ಕಾರದ ಬಹುತೇಕ ಸಚಿವರುಗಳು ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button
error: Content is protected !!