ಸಾಂಸ್ಕೃತಿಕ

ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ನೀಡಿ ಹತ್ಯೆ:  ದರ್ಶನ್ ವಿರುದ್ಧದ ರಹಸ್ಯ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ

Views: 81

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ್ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಇಂದು ನಿರ್ಬಂಧ ವಿಧಿಸಿದೆ.

ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಏಕಪಕ್ಷೀಯವಾಗಿ ಈ ಆದೇಶ ಮಾಡಿತು. ಅಲ್ಲದೇ, ಹೊಸದಾಗಿ ಸೇರ್ಪಡೆ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯ ಕುರಿತು ವಿಚಾರಣಾ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಆರೋಪಪಟ್ಟಿಯ ಯಾವುದೇ ಗುಪ್ತ ಮಾಹಿತಿಯನ್ನು ಪ್ರಸಾರಮಾಡದಂತೆ ಕೋರ್ಟ್ ತಾಕೀತು ಮಾಡಿದೆ.

ಇದೇ ಪ್ರಕರಣದಲ್ಲಿ ದರ್ಶನ್ ಪತ್ನಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣಾ ನ್ಯಾಯಾಲಯ, ದರ್ಶನ್ ವಿರುದ್ಧ ಯಾವುದೇ ಆಧಾರರಹಿತ ಮಾಹಿತಿ ಪ್ರಸಾರ ಮಾಡದಂತೆ ಏಕಪಕ್ಷೀಯವಾಗಿ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ. ಆದರೂ, ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ ಮಾಡುತ್ತಿವೆ ಎಂದು ಅರ್ಜಿದಾರರ ಪರ ವಕೀಲರ ವಾದವನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

ಅಲ್ಲದೇ, ಮುಂದಿನ ಆದೇಶವರೆಗೂ ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ಗೌಪ್ಯ ಮಾಹಿತಿ ಪ್ರಸಾರ ಮಾಡುವುದು/ಮುದ್ರಿಸುವುದು/ಪ್ರಕಟಿಸುವುದು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಷನ್ ಆಕ್ಟ್ 1995ರ ನಿಯಮ 5 ಮತ್ತು ಸುಪ್ರೀಂ ಕೋರ್ಟ್‌ನ  ತೀರ್ಪಿಗೆ ವಿರುದ್ಧವಾಗುತ್ತದೆ. ಹೀಗಾಗಿ ದರ್ಶನ್ ಕುರಿತಂತೆ ಆರೋಪಪಟ್ಟಿಯಲ್ಲಿನ ಗುಪ್ತ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸೆಪ್ಟೆಂಬರ್ 4ರಂದು ಚಾರ್ಜ್ಶೀಟ್ ಸಲ್ಲಿಸಿದ್ದರು. ದರ್ಶನ್ರನ್ನು ಎ2 ಆರೋಪಿಯಾಗಿಯೇ ಮುಂದುವರಿಸಲಾಗಿದೆ. ಪ್ರಕರಣದ ಆರೋಪಿಗಳಿಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಈ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದಾರೆ.

ಆರೋಪಪಟ್ಟಿಯ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ಕೋರಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠವು ಮಂಗಳವಾರದಂದು ಆದೇಶ ಹೊರಡಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ಆದೇಶ ಪ್ರಕಟವಾಗಿದೆ.

Related Articles

Back to top button
error: Content is protected !!