ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಕ್ಷೇತ್ರಕ್ಕೆ ಅ.21ಕ್ಕೆ ಉಪ ಚುನಾವಣೆ

Views: 151
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ವಿಧಾನ ಷರಿಷತ್ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯಿಂದಾಗಿ ಇದೀಗ ಉಪ ಚುನಾವಣೆ ನಡೆಯಲಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ (ಸೆ.19) ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದು, ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಲಿದೆ. ಇನ್ನು ಅಕ್ಟೋಬರ್ 28ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.
ಈ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದೆ. ಹೀಗಾಗಿ ಈ ಉಪಚುನಾವಣೆಯಲ್ಲಿ ಎರಡು ಜಿಲ್ಲೆಗಳ ಸ್ಥಳೀಯ ಆಡಳಿತ ಮತದಾರರು ಮತ ಚಲಾಯಿಸಲಿದ್ದಾರೆ. ದ.ಕ ಜಿಲ್ಲೆಯಲ್ಲಿ 234 ಮತ ಕಟ್ಟೆ 3,551 ಮತದಾರರು. ಉಡುಪಿಯಲ್ಲಿ 158 ಮತಕಟ್ಟೆ ಹಾಗೂ 2,486 ಮತದಾರರು ಇದ್ದಾರೆ.
ಈ ಉಪಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಸೇರಿ 234 ಸ್ಥಳೀಯ ಸಂಸ್ಥೆಗಳಲ್ಲಿ 3,551 ಮಂದಿ ಮತಚಲಾಯಿಸಲು ಅರ್ಹತೆ ಹೊಂದಿದ್ದಾರೆ ಉಡುಪಿಯಲ್ಲಿ 158 ಸ್ಥಳೀಯ ಸಂಸ್ಥೆಗಳಲ್ಲಿ 2486 ಮಂದಿ ಮತ ಚಲಾಯಿಸಲಿದ್ದಾರೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 3 ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವಧಿ 5/1/2028ರ ತನಕ ಇತ್ತು. ಜೂನ್ 24ರಂದು ಅವರು ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳದ ಕಾರಣ ಈಗ ಉಪ ಚುನಾವಣೆ ಎದುರಾಗಿದೆ.






