ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ವಿಭಿನ್ನ ಪ್ರತಿಭಟನೆ

Views: 34
ಕನ್ನಡ ಕರಾವಳಿ ಸುದ್ದಿ :ಇದೇ ತಿಂಗಳ 5 ರಿಂದ ಬಸ್ ಟಿಕೆಟ್ ದರ ಶೇ.15ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದರು.
ನಗರದಲ್ಲಿಂದು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ರವಿ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಪ್ರಯಾಣಿಕರಿಗೆ ಗುಲಾಬಿ ನೀಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖವಾಡ ಧರಿಸಿ, ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗುಲಾಬಿ ಹೂ ಕೊಟ್ಟ ನಾಯಕರು ತಮ್ಮ ಪ್ರತಿಭಟನೆಯ ಉದ್ದೇಶ ಮನವರಿಕೆ ಮಾಡಿಕೊಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಿ. ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಅವರು ಅಸಮಾಧಾನ ಹೊರ ಹಾಕಿದರು.
ಈ ವೇಳೆ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಕ್ಕೆ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಆರ್.ಅಶೋಕ್ ಹಾಗೂ ಬಿಜೆಪಿ ನಾಯಕರನ್ನು ತಡೆಯುತ್ತಿದ್ದಂತೆ ಆರ್.ಅಶೋಕ್ ಪೊಲೀಸರ ಮೇಲೆ ರೋಷಾವೇಷ ವ್ಯಕ್ತಪಡಿಸಿದ್ದಾರೆ.






