ಇಂದಿನಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

Views: 108
ಕನ್ನಡ ಕರಾವಳಿ ಸುದ್ದಿ: ಬಿರು ಬಿಸಿಲಿನಿಂದ ಬಸವಳಿದ ಜನತೆಗೆ ಇಂದಿನಿಂದ ವರುಣ ಕೃಪೆ ತೋರಲಿದ್ದಾನೆ. ರಾಜ್ಯದ ಕೆಲವೆಡೆ ಮಂಗಳವಾರದಿಂದ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜ ನಗರ, ಕೊಡಗು, ಹಾಸನ, ಶಿವಮೊಗ್ಗ ಮತ್ತು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಮಂಗಳವಾರ ಮುಂಗಾರು ಪೂರ್ವ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಆರೋಗ್ಯ ಸಮಸ್ಯೆ ಇರುವವರು, ಶಿಶುಗಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಬಿಸಿಲಿಗೆ ಹೋಗುವುದನ್ನು ತಪ್ಪಿಸುವಂತೆ ಐಎಂಡಿ ಎಚ್ಚರಿಕೆ ನೀಡಿದೆ.
ಅತಿಯಾದ ತಾಪಮಾನದ ಕಾರಣ ಮುಂಗಾರು ಪೂರ್ವ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್.ಪುವಿಯ ರಸನ್ ಮಾಹಿತಿ ನೀಡಿದರು.