ಧಾರ್ಮಿಕ

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸಿ:ಗೃಹ ಸಚಿವ ಅಮಿತ್ ಶಾ ಅವರಿಗೆ ಸಂತರ ಮನವಿ

Views: 78

ಕನ್ನಡ ಕರಾವಳಿ ಸುದ್ದಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಪ್ರಕರಣವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸಿದೆ. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂಬ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗವು ದೆಹಲಿಯಲ್ಲಿಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಮನವಿ ಸಲ್ಲಿಸಿತ್ತು.

ಹಿಂದೂಗಳು ಹಾಗೂ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ಹಾಗೂ ಹಿಂದೂ ಮಠಾಧೀಶರ ಮೇಲೆ ಪದೇ ಪದೇ ದಾಳಿಯಾಗುತ್ತಿದೆ. 6 ತಿಂಗಳ ಅಂತರದಲ್ಲಿ ದಾಳಿಗಳು ನಡೆಯುತ್ತಿವೆ. ಈ ವ್ಯವಸ್ಥಿತ ದಾಳಿಗಳ ಹಿಂದೆ ಷಡ್ಯಂತ್ರವಿದೆ. ಹೀಗಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.

ಈ ನಿಯೋಗದಲ್ಲಿ ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ 8 ಪೀಠಗಳ ಸ್ವಾಮೀಜಿಗಳು ಈ ನಿಯೋಗದಲ್ಲಿದ್ದರು.

ಧರ್ಮಸ್ಥಳ ಪ್ರಕರಣದ ಎಲ್ಲ ಬೆಳವಣಿಗೆಗಳನ್ನು ನಾನೇ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟದಲ್ಲಿ ಸಭೆ ನಡೆಸುತ್ತೇವೆ. ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

ಧಾರ್ಮಿಕ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ ಎಂದು ಆಶ್ವಾಸನೆ ನೀಡಿರುವ ಅವರು, ಸಮಾಜವನ್ನು ಜಾಗೃತಿಗೊಳಿಸುವಂತೆ ಸ್ವಾಮೀಜಿಗಳಿಗೆ ಗೃಹ ಸಚಿವರು ಸಲಹೆ ಕೊಟ್ಟಿದ್ದಾರೆ.

ಇತ್ತೀಚೆಗಷ್ಟೆ ಪ್ರತಿಪಕ್ಷ ಬಿಜೆಪಿಯು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಶವಗಳನ್ನು ಹೂತಿಟ್ಟಿರುವ ಪ್ರಕರಣದ ವ್ಯಕ್ತಿಗಳ ಹಿಂದಿರುವ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು ಎಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿತ್ತು.

ಈ ಬೆಳವಣಿಗೆಗಳ ಬೆನ್ನಲ್ಲೆ ಮಠಾಧೀಶರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಆದರೆ,ರಾಜ್ಯಸರ್ಕಾರ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಲು ಸ್ಪಷ್ಟವಾಗಿ ನಿರಾಕರಿಸಿದ್ದು, ಎಸ್‌ಐಟಿಯೇ ಸಮರ್ಥವಾಗಿ ತನಿಖೆ ನಡೆಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿಗೆ ತಿರುಗೇಟು ನೀಡಿದೆ.

Related Articles

Back to top button
error: Content is protected !!