ಇತರೆ

ದತ್ತ ಜಯಂತಿ ಬ್ಯಾನ‌ರ್ ವಿವಾದ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ 

Views: 147

ಕನ್ನಡ ಕರಾವಳಿ ಸುದ್ದಿ: ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಕಾಂಗ್ರೆಸ್ ಕಾರ್ಯಕರ್ತ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾದ ಗಣೇಶ್ (40) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದತ್ತ ಜಯಂತಿ ಬ್ಯಾನ‌ರ್ ತೆರವುಗೊಳಿಸುವ ಸಂಬಂಧ ಆರಂಭವಾದ ಜಗಳ ತಾರಕಕ್ಕೇರಿ, ಗಣೇಶ್ ಅವರ ಮೇಲೆ ಸಂಜಯ್ ಮತ್ತು ಮಿಥುನ್ ಎಂಬುವವರು ಮಚ್ಚಿನಿಂದ ದಾಳಿ ಮಾಡಿ ಕೊಂದಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಘಟನೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ನಂತರ ಸಖರಾಯ  ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮೈ ಅವರು ಘಟನೆಯ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ತಂಡಗಳನ್ನು ರಚಿಸಿರುವುದಾಗಿ ತಿಳಿಸಿದ್ದಾರೆ. ಈ ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೊಲೆಯಾದ ಗಣೇಶ್ ಅವರ ಮೃತದೇಹವಿದ್ದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್ ಅವರು, ಈ ಘಟನೆಗೆ ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆ ನಡೆದು, ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 8 ಜನರು ಶಾಮೀಲಾಗಿರುವ ಸಾಧ್ಯತೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸರಿಯಾದ ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು” ಎಂದು ಶಾಸಕರು ಹೇಳಿದ್ದಾರೆ.

ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.

Related Articles

Back to top button
error: Content is protected !!