ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಳಿ ಹೆಚ್ಚಳ,ಎಲ್ಲೆಲ್ಲಿ ಮಳೆ?
Views: 115
ಕನ್ನಡ ಕರಾವಳಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಈಗಾಗಲೇ ನೆರೆಯ ತಮಿಳುನಾಡಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಇದೀಗ ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದರ ಜೊತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಇದಕ್ಕೆ ಇಂಬು ನೀಡುವಂತೆ ನಿನ್ನೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಚದುರಿದಂತೆ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ನೇರ ಪರಿಣಾಮ ತಮಿಳುನಾಡು ಮಾತ್ರವಲ್ಲದೇ ಈಗ ಕರ್ನಾಟಕದ ಮೇಲೆ ಬೀರಲಾರಂಭಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಗಣನೀಯವಾಗಿ ಕುಸಿದಿದೆ. ದಿನವಿಡೀ ಮೋಡಕವಿದ ವಾತಾವರಣ ಚಳಿಯ ಪ್ರಮಾಣ ಹೆಚ್ಚಳವಾಗುವಂತೆ ಮಾಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ.. ಜನವರಿ 26ರಿಂದ ಜನವರಿ 28ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಬದಲಾದ ಹವಾಮಾನ ಪರಿಸ್ಥಿತಿ ಮಲೆನಾಡು ಮತ್ತು ಬಯಲು ಸೀಮೆಯ ಜನರಲ್ಲಿ ಆತಂಕ ಮನೆ ಮಾಡಿದೆ, ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ.
ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋುತ್ಯ ಭಾಗದಲ್ಲಿ ಮತ್ತು ಶ್ರೀಲಂಕಾಗೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತ ಇದೀಗ ತನ್ನ ಪಥ ಬದಲಿಸಿದೆ. ಈ ವ್ಯವಸ್ಥೆ ಇದೀಗ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ಸಕ್ರಿಯವಾಗಿದೆ.
ಈ ಮಾರುತಗಳ ಚಲನೆಯಿಂದಾಗಿ ತೇವಾಂಶ ಭರಿತ ಗಾಳಿ ರಾಜ್ಯದ ಒಳನಾಡಿನತ್ತ ಬೀಸುತ್ತಿದೆ. ಇದರ ಪರಿಣಾಮ ಕರ್ನಾಟಕ ಪ್ರದೇಶದಲ್ಲಿ ಅಸ್ಥಿರತೆ ಉಂಟಾಗಿದ್ದು, ಗಾಳಿಯ ಒತ್ತಡ ಕಡಿಮೆಯಾಗಿ ಮೋಡಗಳು ದಟ್ಟವಾಗಿ ಕವಿಯುತ್ತಿವೆ. ಈ ಪ್ರಕ್ರಿಯೆಯಿಂದಾಗಿ ದಕ್ಷಿಣ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದರೆ. ಉತ್ತರ ಭಾಗದಲ್ಲಿ ಚಳಿ ತೀವ್ರಗೊಂಡಿದೆ.
ಎಲ್ಲೆಲ್ಲಿ ಮಳೆ?
ಹವಾಮಾನ ಇಲಾಖೆ ಪ್ರಕಾರ ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿನ್ನೆ ಸಂಜೆ ಸಾಧಾರಣ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಇದೇ ರೀತಿಯ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಳಿಯ ಅಬ್ಬರ
ಕಳೆದ 2 ದಿನಗಳಿಂದ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿ ಜನರನ್ನು ಹೈರಾಣಾಗಿಸಿದೆ. ದಾವಣಗೆರೆಯಲ್ಲಿ ರಾಜ್ಯದ ಕನಿಷ್ಛ ಅಂದರೆ 11 ಡಿಗ್ರಿ ತಾಪಮಾನ ದಾಖಲಾಗಿದ್ದು, ಮಾತ್ರವಲ್ಲದೇ ಬೀದರ್, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ತಾಪಮಾನ 11ರಿಂದ 14 ಡಿಗ್ರಿ ಸೆಲ್ಸಿಯಸ್ ವರೆಗೂ ಕುಸಿದಿದೆ. ವಿಜಯಪುರ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ 14 ರಿಂದ 18 ಡಿಗ್ರಿ ತಾಪಮಾನ ದಾಖಲಾಗಿದೆ.






