ಯುವಜನ

ರಾತ್ರಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಉಬ್ಬು ಕಾಣದೆ ರಸ್ತೆಗೆ ಬಿದ್ದು ವಿದ್ಯಾರ್ಥಿನಿ ಸಾವು

Views: 88

ಕನ್ನಡ ಕರಾವಳಿ ಸುದ್ದಿ: ರಾತ್ರಿ ವೇಳೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಉಬ್ಬು ಕಾಣದೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಎಂಸಿಎ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಹೊರವಲಯದಲ್ಲಿ ನಡೆದಿದೆ.

ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ. ಮೃತರನ್ನು ಹಾಸನ ನಗರದ ಸತ್ಯಮಂಗಲ ಬಡಾವಣೆಯ ನಿವಾಸಿ ಪ್ರಿಯಾ (23) ಎಂದು ಗುರುತಿಸಲಾಗಿದೆ.

ಇವರು ಖಾಸಗಿ ಕಾಲೇಜೊಂದರಲ್ಲಿ ಎಂಸಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಘಟನೆಯಲ್ಲಿ ಬೈಕ್‌ನಲ್ಲಿದ್ದ ಮತ್ತೋರ್ವ ಯುವತಿ ಸ್ವಾತಿ (24) ಅವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯುವತಿಯರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೆ ಬೈಕ್ ಏಕಾಏಕಿ ಹಾರಿದೆ. ಪರಿಣಾಮ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಸವಾರಿ ವೇಳೆ ಯುವತಿಯರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಕೆಳಗೆ ಬಿದ್ದ ರಭಸಕ್ಕೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಪ್ರಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ನೇಹಿತೆಯರಿಬ್ಬರು ಬೈಕ್ ರೈಡ್‌ಗೆ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ಪ್ರತಿಭಾವಂತ ವಿದ್ಯಾರ್ಥಿನಿ ಹೆಲ್ಮೆಟ್ ಇಲ್ಲದ ಕಾರಣ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ.

Related Articles

Back to top button
error: Content is protected !!