ಸೌಜನ್ಯ ಅತ್ಯಾಚಾರ, ಹತ್ಯೆ ಕೇಸ್: ಸಿಬಿಐಗೆ ಸುಪ್ರೀಂಕೋರ್ಟ್ ತನಿಖೆಯ ವರದಿ ಸಲ್ಲಿಸುವಂತೆ ನೊಟೀಸ್
Views: 49
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.23ರಂದು ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.
2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯ ಅವರ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆ ನಡೆದಿತ್ತು. ಕಾರ್ಕಳದ ಸಂತೋಷ್ ರಾವ್ ಎಂಬಾತನನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದಡಿ ಬಂಧಿಸಲಾಗಿತ್ತು.
ಕೆಲವು ಸಮಯಗಳ ಹಿಂದೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಸಂತೋಷ್ ರಾವ್‌ನನ್ನು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿತ್ತು. ಈ ವೇಳೆ ಸಿಬಿಐ ನ್ಯಾಯಾಲಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ತೋರಿಸಿತ್ತು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಕುಸುಮಾವತಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟೀಸ್ ಜಾರಿಗೊಳಿಸಿದೆ.






