ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
Views: 126
ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣ ಪ್ರಕಟವನ್ನು ಇಂದಿಗೆ ಕಾಯ್ದಿರಿಸಿತ್ತು.
ಇದೀಗವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೆಯೇ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶರ ವಿನಯ್ ಕುಲಕರ್ಣಿಯ ಮಾತುಗಳೇನು?
ಶಿಕ್ಷೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಎದುರು ಅಭಿಪ್ರಾಯ ತಿಳಿಸಿದ ವಿನಯ್ ಕುಲಕರ್ಣಿ, ”27 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಎರಡು ಬಾರಿ ಲೋಕಸಭಾ ಚುನಾವಣೆಗೆ ನಿಂತು ಸೋತಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಒಂದು ಬಾರಿ ಸಚಿವನಾಗಿದ್ದೇನೆ. ಇಡೀ ಕ್ಷೇತ್ರದಲ್ಲಿ ನಾನು ಯಾರಿಗೂ ತೊಂದರೆ ಮಾಡಿದವನಲ್ಲ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸದೆ ಪಿತೂರಿ ಮಾಡಲಾಗಿದೆ. ರಾಜಕೀಯ ಕಾರಣಕ್ಕೆ ನನ್ನ ವಿರುದ್ಧ ಕೇಸ್ ಹಾಕಲಾಗಿದೆ,” ಎಂದು ಹೇಳಿದರು.






