ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ!
Views: 33
ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ‘ಜೀವಾವಧಿ ಶಿಕ್ಷೆ’ ಪ್ರಕಟಿಸಿದೆ. ಈ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಅವರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.
ಪ್ರಕರಣದ 15ನೇ ಆರೋಪಿಯಾಗಿದ್ದ (A-15) ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ನ್ಯಾಯಾಲಯ ಏಪ್ರಿಲ್ 15ರಂದೇ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶರು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಭಾರತೀಯ ಚುನಾವಣಾ ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ನ್ಯಾಯಾಲಯವು 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಶಿಕ್ಷೆ ವಿಧಿಸಿದರೆ, ಅವರು ತಕ್ಷಣವೇ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯಾಗಿರುವುದರಿಂದ ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ.
ಸ್ಪೀಕರ್ ನಡೆ ಏನು?
ನ್ಯಾಯಾಲಯದ ಶಿಕ್ಷೆಯ ಆದೇಶದ ಪ್ರತಿ ಕೈ ಸೇರಿದ ನಂತರ ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್ ಅವರು ಅದನ್ನು ಪರಿಶೀಲಿಸಲಿದ್ದಾರೆ. ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ವಿನಯ್ ಕುಲಕರ್ಣಿ ಅವರನ್ನು ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಿದ್ದಾರೆ. ವಿನಯ್ ಕುಲಕರ್ಣಿ ಅವರ ಅನರ್ಹತೆಯಿಂದಾಗಿ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರವು ತೆರವಾಗಲಿದ್ದು, ರಾಜ್ಯದಲ್ಲಿ ಮತ್ತೊಂದು ಉಪಚುನಾವಣೆಗೆ ವೇದಿಕೆ ಸಿದ್ಧವಾಗಲಿದೆ. 2016ರಲ್ಲಿ ನಡೆದ ಯೋಗೇಶ್ ಗೌಡ ಕೊಲೆ ಪ್ರಕರಣವು ಹತ್ತು ವರ್ಷಗಳ ಬಳಿಕ ಈ ಹಂತಕ್ಕೆ ಬಂದು ತಲುಪಿದ್ದು, ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.






