ಬೆಂಗಳೂರಿಗೆ ಹೋಗುತ್ತಿದ್ದ ಸ್ಲೀಪರ್ ಬಸ್ ಟೈಯರ್ ಸ್ಪೋಟ: ಧಗಧಗನೇ ಹೊತ್ತಿ ಉರಿದ ಬಸ್,36 ಪ್ರಯಾಣಿಕರು ಪಾರು
Views: 165
ಕನ್ನಡ ಕರಾವಳಿ ಸುದ್ದಿ: ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಮೊದಲು ಟೈರ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಬಸ್‌ಗೆ ವ್ಯಾಪಿಸಿದೆ.
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರನ್ನು ಎಚ್ಚರಿಸಿ ಕೆಳಗೆ ಇಳಿಸಿದ್ದಾರೆ. ಚಾಲಕನ ಸಮಯೋಚಿತ ಪ್ರಯತ್ನದಿಂದ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಆದರೆ ಬೆಂಕಿಯ ತೀವ್ರತೆ ಹೆಚ್ಚಾದ ಪರಿಣಾಮ ನಡುರಸ್ತೆಯಲ್ಲೇ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಘಟನೆ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.






