ರಾಜಕೀಯ

ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕರ್ನಾಟಕದಿಂದ ಯಾರಿಗೆಲ್ಲಾ ಟಿಕೆಟ್

Views: 45

ಕನ್ನಡ ಕರಾವಳಿ ಸುದ್ದಿ: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಗುರುವಾರ ತನ್ನ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಕರ್ನಾಟಕದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವ ಕಾಂಗ್ರೆಸ್, ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರಿಗೂ ಟಿಕೆಟ್ ನೀಡಿದೆ.

ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ಡಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್ನಿಂದ ಪ್ರಣವ್ ಝಾ ಅವರನ್ನು ಪಕ್ಷ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಹಾಲಿ ಸದಸ್ಯರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಈ ಚುನಾವಣೆಯನ್ನು ಘೋಷಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜೂನ್ 21ರಿಂದ ಜುಲೈ 19ರ ನಡುವೆ ವಿವಿಧ ದಿನಾಂಕಗಳಲ್ಲಿ ನಿವೃತ್ತಿಯಾಗಲಿರುವ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳಿಗೆ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳಿಗೆ, ಜಾರ್ಖಂಡ್ ನಲ್ಲಿ ಎರಡು ಸ್ಥಾನಗಳಿಗೆ ಹಾಗೂ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ.

 

Related Articles

Back to top button
error: Content is protected !!