ಯುವಜನ

ಹೋಮ್‌ಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾವು: ಲವ್ ಜಿಹಾದ್ ಆರೋಪ ಮಾಡಿದ ತಾಯಿ

Views: 101

ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಬಳಿಯ ಹೋಮ್‌ಸ್ಟೇನಲ್ಲಿ ಬೆಳಕಿಗೆ ಬಂದಿದೆ.

ಮೃತ ಯುವತಿಯನ್ನು ಸಾಯಿ ಸುರಭಿ ಎಂದು ಗುರುತಿಸಲಾಗಿದೆ. ಇನ್ನು ಈಕೆಯ ಪ್ರಿಯಕರ ಎನ್ನಲಾದ ಕೇರಳ ಮೂಲದ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಹೋಮ್‌ಸ್ಟೇನಲ್ಲಿ ಪತ್ತೆಯಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗಳ ಸಾವಿನ ಬೆನ್ನಲ್ಲೇ ತಾಯಿ ಗೀತಾ ಅವರು ಮಾಧ್ಯಮಗಳ ಎದುರು ಕಣ್ಣೀರು ಹಾಕಿದ್ದು, ಇದೊಂದು ಲವ್ ಜಿಹಾದ್ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ, ಕ್ಯಾಬ್ ಡ್ರೈವರ್ ಸಂಜೀತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಮ್‌ಸ್ಟೇಗೆ ಬಂದು ತಂಗಿದ್ದರು. ಇಂದು ಚೆಕ್-ಔಟ್ ಸಮಯ ಮುಗಿದರೂ ರೂಮ್ ತೆರೆಯದಿದ್ದಾಗ ಹೋಮ್‌ಸ್ಟೇ ಕೇರ್‌ಟೇಕರ್ ಬಂದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೇಣು ಹಾಕಿದ್ದ ಹಗ್ಗವನ್ನು ಕತ್ತರಿಸಿದ ಸ್ಥಿತಿಯಲ್ಲಿ ಇತ್ತು. ಅಲ್ಲದೆ ಸ್ಥಳದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ವಿಷ ಸೇವಿಸಿರುವ ಸಾಧ್ಯತೆಗಳೂ ದಟ್ಟವಾಗಿವೆ. ರೂಮ್‌ನಲ್ಲಿ ಒಂದು ಡೈರಿ ಸಿಕ್ಕಿದ್ದು, ಅದರಲ್ಲಿ ಹಲವು ವಿಚಾರಗಳನ್ನು ಬರೆಯಲಾಗಿದೆ. ಇದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಸಂಜೀತ್ ಅಲಿಗೆ ಪ್ರಜ್ಞೆ ಬಂದ ನಂತರವಷ್ಟೇ ಇದು ಕೊಲೆಯೋ ಅಥವಾ ಇಬ್ಬರೂ ಸೇರಿ ಮಾಡಿಕೊಂಡ ಆತ್ಮಹತ್ಯೆಯೋ ಎಂಬುದು ಸ್ಪಷ್ಟವಾಗಲಿದೆ ಎಂದು ಎಸ್‌ಪಿ ಕುಶಾಲ್ ಚೌಕ್ಸಿ ತಿಳಿಸಿದ್ದಾರೆ. ಪ್ರಸ್ತುತ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!