ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ: ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್

Views: 0
ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು 2025- 26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಬೇಕು ಎಂದು ನಗರದ ಅನಿಕೇತ್ ಎಂಬ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕ ಸದಸ್ಯ ನ್ಯಾಯ ಪೀಠ ವಜಾಗೊಳಿಸಿದೆ.
ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ. ಒಬ್ಬ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು ಅದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದೆ.
ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ -2009ರ ನಿಯಮಗಳು ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಗಮನದಲ್ಲಿಟ್ಟುಕೊಂಡು ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಎಂಬ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಜನರಲ್ ವಿಕ್ರಂ ಹುಯಿಲಗೋಳ ಅವರ ವಾದವನ್ನು ನ್ಯಾಯಪೀಠ ಮಾನ್ಯ ಮಾಡಿದೆ.