ಕುಂಭಾಸಿಯಲ್ಲಿ ಸ್ಕೂಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸವಾರ ಸಾವು
Views: 159
ಕನ್ನಡ ಕರಾವಳಿ ಸುದ್ದಿ:ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಆನೆಗುಡ್ಡೆ ಸ್ವಾಗತ ಗೋಪುರದ ಬಳಿ ಸೋಮವಾರ ರಾತ್ರಿ ಸ್ಕೂಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ವಡ್ಡರ್ಸೆಯ ಗಣೇಶ್(34) ಎಂದು ಗುರುತಿಸಲಾಗಿದೆ.
ಸ್ಕೂಟರ್ ಸವಾರ ಕುಂದಾಪುರದಿಂದ ವಡ್ಡರ್ಸೆಗೆ ಬರುತ್ತಿದ್ದ ವೇಳೆ ಅದೇ ದಿಕ್ಕಿನಿಂದ ಆರೋಪಿ ಅರವಿಂದ್ ಎಂಬವರು ಕುಂದಾಪುರದಿಂದ ಉಡುಪಿ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಹಿಂಬದಿಯಿಂದ ನೇರ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಗಣೇಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆ, ಮುಖ, ಹೊಟ್ಟೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ತಕ್ಷಣ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಕೋಟೇಶ್ವರದ ಎನ್.ಆರ್. ಆಚಾರ್ಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಂಗಳವಾರ ಗಣೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.






