ಆಸ್ಪತ್ರೆಯ ಶೌಚಾಲಯದಲ್ಲಿ ನರ್ಸ್ ಮೃತದೇಹ ಪತ್ತೆ!
Views: 0
ಕನ್ನಡ ಕರಾವಳಿ ಸುದ್ದಿ:ಆಸ್ಪತ್ರೆಯ ಶೌಚಾಲಯವೊಂದರಲ್ಲಿ 30 ವರ್ಷದ ನರ್ಸ್ ರುಪಾಲಿ ಬರ್ಮನ್ ಅವರ ಮೃತದೇಹ ಪತ್ತೆಯಾಗಿದೆ.
ದೀರ್ಘಕಾಲ ಶೌಚಾಲಯದ ಬಾಗಿಲು ಮುಚ್ಚಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ಮೃತದೇಹವನ್ನು ಹೊರತೆಗೆದಿದ್ದಾರೆ.
ಕೋಲ್ಕತ್ತಾ ನಗರದ ನೀಲ್ ರತನ್ ಸಿರ್ಕಾರ್ ವೈದ್ಯಕೀಯ ಕಾಲೇಜಿನಲ್ಲಿ ರುಪಾಲಿ ಅವರು ಆಸ್ಪತ್ರೆಯ ಸ್ತ್ರೀರೋಗ ವಿಭಾಗದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶೌಚಾಲಯದ ಬಾಗಿಲು ದೀರ್ಘಕಾಲ ಮುಚ್ಚಿದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಹಲವು ಬಾರಿ ಕರೆ ಮಾಡಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಬಲ ಪ್ರಯೋಗಿಸಿ ಶೌಚಾಲಯದ ಬಾಗಿಲು ತೆರೆದು ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸಾವಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಕೋಲ್ಕತ್ತಾ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.






