ಕುಂದಾಪುರ: ಬಡರೋಗಿಗಳಿಂದ ಚಿಕಿತ್ಸೆಯ ವೇಳೆ ಹಣ ಪಡೆಯುತ್ತಿರುವ ಬಗ್ಗೆ ವರದಿ; ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ, ವ್ಯಾಪಕ ಖಂಡನೆ
Views: 103
ಕನ್ನಡ ಕರಾವಳಿ ಸುದ್ದಿ: ಕನ್ನಡ ಪ್ರಭ ಕುಂದಾಪುರ ಹಾಗೂ ಬೈಂದೂರು ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರಕಾರಿ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ವೈದ್ಯರು ಬಡರೋಗಿಗಳಿಂದ ಚಿಕಿತ್ಸೆಯ ವೇಳೆ ಹಣ ಪಡೆಯುತ್ತಿರುವ ಬಗ್ಗೆ ಶ್ರೀಕಾಂತ್ ಹೆಮ್ಮಾಡಿ ತಮ್ಮ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಇದೇ ವಿಚಾರದಲ್ಲಿ ದ್ವೇಷಗೊಂಡ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ಆ.21ರಂದು ಬೆಳಗ್ಗೆ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲೊಂದರಲ್ಲಿ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಡಾ. ಮಹೇಂದ್ರ ಶೆಟ್ಟಿ, ಏಕಾಏಕಿ ಆಕ್ರೋಶ ವ್ಯಕ್ತಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ‘ನನ್ನ ವಿರುದ್ಧವೇ ವರದಿ ಪ್ರಕಟಿಸುತ್ತೀಯಾ?’ ಎಂದು ಬೆದರಿಕೆ ಹಾಕಿ, ಪತ್ನಿಯ ಎದುರಲ್ಲೇ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವ್ಯಾಪಕ ಖಂಡನೆ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬ್ರಹ್ಮಾವರ, ಬೈಂದೂರು, ಕಾಪು, ಕುಂದಾಪುರ, ಹೆಬ್ರಿ, ಕಾರ್ಕಳ ತಾಲೂಕು ಘಟಕಗಳು ತೀವ್ರವಾಗಿ ಖಂಡಿಸಿವೆ.
ಅದೇ ರೀತಿ ಈ ಹಲ್ಲೆಯನ್ನು ಸಹಬಾಳ್ವೆ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಪ್ರೊ.ಫಣಿರಾಜ್, ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಹಾಗೂ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಸಂತೋಷ ಬಜಾಲ್ ತೀವ್ರವಾಗಿ ಖಂಡಿಸಿ, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿದ್ದಾರೆ.
ಪತ್ರಕರ್ತನ ಮೇಲೆ ಹಲ್ಲೆ ಮಾಡಿದ ವೈದ್ಯ ಡಾ.ಮಹೇಂದ್ರ ಶೆಟ್ಟಿಯನ್ನು ಕೂಡಲೇ ಬಂಧಿಸಿ, ಸಮಗ್ರ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಇಂದು ಕುಂದಾಪುರದಲ್ಲಿ ಡಿ.ವೈ.ಎಫ್.ಐ ಪ್ರತಿಭಟನೆಯಲ್ಲಿ ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದರು.

ಕುಂದಾಪುರದಲ್ಲಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಖಂಡಿಸಿರುವ ಸಚಿವ ಯು.ಟಿ. ಖಾದರ್, ಈ ಕೃತ್ಯ ಸಹಿಸಲು ಅಸಾಧ್ಯ ಎಂದಿದ್ದು, ಸಮರ್ಥ ಅಧಿಕಾರಿಯ ಮೂಲಕ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.






