ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ, ಅಲರ್ಟ್ ಘೋಷಣೆ
Views: 42
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ವರುಣಾರ್ಭಟ ಹೆಚ್ಚಲಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬಾಗಲಕೋಟೆ,ವಿಜಯಪುರ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ.






