ಭೀಕರ ಅಪಘಾತ: ದಂಪತಿ, ಪುತ್ರಿ ಸ್ಥಳದಲ್ಲೇ ಸಾವು
Views: 57
ಕನ್ನಡ ಕರಾವಳಿ ಸುದ್ದಿ: ಗೌರಿ – ಗಣೇಶ ಹಬ್ಬದ ಸಂಭ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳಿದ್ದ ಕುಟುಂಬಸ್ಥರು ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ಮುತ್ತುರಾಜ್ (35), ಅವರ ಪತ್ನಿ ಕಾವ್ಯ (30) ಹಾಗೂ ಎಂಟು ವರ್ಷದ ಪುತ್ರಿ ಕೀರ್ತನಾ ಸ್ಥಳದಲ್ಲೇ ಪ್ರಾಣ ಕಳೆದುಕೊಂಡವರು. ದಂಪತಿಯ ಮತ್ತೊಂದು ಮಗುವಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಆ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಣೇಶ ಹಬ್ಬ ಮುಗಿಸಿ ವಾಪಸ್ ತೆರಳುವಾಗ ಭೀಕರ ಅಪಘಾತ: ಗೌರಿ – ಗಣೇಶ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಈ ದಂಪತಿ ಮಕ್ಕಳು ಸಮೇತ ಊರಿಗೆ ಆಗಮಿಸಿದ್ದರು. ಭಾನುವಾರ ಹಬ್ಬದ ಎಲ್ಲ ಸಂಭ್ರಮಗಳನ್ನು ಮುಗಿಸಿಕೊಂಡು ಇಂದು ನಸುಕಿನ ಜಾವ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳೆಸಿದ್ದರು. ಆದರೆ, ಕೊಪ್ಪ ಗ್ರಾಮದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನ ಮತ್ತು ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ದಂಪತಿ ಹಾಗೂ ಹೆಣ್ಣು ಮಗು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಮಗು ತೀವ್ರವಾಗಿ ಗಾಯಗೊಂಡಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ: ಘಟನಾ ಸ್ಥಳಕ್ಕೆ ಕೊಪ್ಪ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.






