ಕೇರಳದಲ್ಲಿ ಭಾರಿ ಮಳೆ: ಭೂಕುಸಿತ, ಹಠಾತ್ ಪ್ರವಾಹದಿಂದ 5 ಮಂದಿ ಸಾವು, ಇಬ್ಬರು ನಾಪತ್ತೆ
Views: 82
ಕನ್ನಡ ಕರಾವಳಿ ಸುದ್ದಿ: ಭಾರಿ ಮಳೆಯಿಂದಾಗಿ ಐದು ಮಂದಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ
ಇಬ್ಬರು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕೇರಳದಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಅಲ್ಲಲ್ಲಿ ಭೂಕುಸಿತ, ಹಠಾತ್ ಪ್ರವಾಹ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಪಾಯಕಾರಿ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಾಂತರಿಸಲು ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ತೀವ್ರ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಗಂಟೆಗೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಡಳಿತಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸಲು ಮತ್ತು ಅಗತ್ಯವಿದ್ದಲ್ಲಿ ಸ್ಥಳಾಂತರ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ವಿಘ್ನೇಶ್ವರಿ ಅವರು ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹವಾಮಾನ ಪರಿಸ್ಥಿತಿಯ ಕುರಿತು ಎಸ್‌ಎಂಎಸ್ ಮೂಲಕ ಎಚ್ಚರಿಕೆಗಳನ್ನು ರವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮಲಪ್ಪುರಂ ಜಿಲ್ಲೆಯ ನಿಲಂಬೂರ್-ಅಮರಂಬಲಂ ಪ್ರದೇಶದಲ್ಲಿ ಕೋಟ್ಟಾಪುಳಾ ನದಿಯ ಪ್ರವಾಹಕ್ಕೆ ಸಿಲುಕಿ ವಂಡೂರ್‌ನಿಂದ ಬಂದಿದ್ದ ಐವರು ಕೊಚ್ಚಿ ಹೋಗಿದ್ದು, ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಒಬ್ಬರನ್ನು ಸ್ಥಳೀಯರೊಬ್ಬರು ರಕ್ಷಿಸಿದರು. ಅಲ್ಲಿ ವಿಶೇಷ ವಿಪತ್ತು ನಿರ್ವಹಣಾ ಪಡೆಯ ತಂಡವನ್ನು ತಕ್ಷಣವೇ ನಿಯೋಜಿಸುವಂತೆ ಮುಖ್ಯ ಮಂತ್ರಿಗಳು ಆದೇಶಿಸಿದ್ದಾರೆ.
ಕೊಟ್ಟಾಯಂ ಜಿಲ್ಲೆಯ ಟೀಕೋಯ್ ಸಮೀಪದ ವೇಲಾತುಸ್ಸೆರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತಮಿಳುನಾಡಿನ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಸ್ನೇಹಿತೆ ಗಾಯಗೊಂಡಿದ್ದಾರೆ. ಮೃತರನ್ನು ಚೆನ್ನೈನ ಜವಾಹರ್ ನಗರದ ನಿವಾಸಿ ಸಂಗೀತ ಅರುಲ್ ಲಾಲ್ (35) ಎಂದು ಗುರುತಿಸಲಾಗಿದೆ.






