ದಂಪತಿ ಎಂದು ಹೇಳಿಕೊಂಡ 46ರ ಮಹಿಳೆ, 27ರ ಯುವಕ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ!
Views: 77
ಕನ್ನಡ ಕರಾವಳಿ ಸುದ್ದಿ: ಉತ್ತರ ಪ್ರದೇಶದ ನೋಯ್ಡಾ ಮೂಲದ 46 ವರ್ಷದ ವಿವಾಹಿತ ಮಹಿಳೆ ಹಾಗೂ ಆಕೆಯ 27 ವರ್ಷದ ಪ್ರಿಯಕರ ಹೋಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಗೌತಮ್ ಬುದ್ಧ ನಗರದ ನಿವಾಸಿ ಪಿಂಕಿ (46) ಹಾಗೂ ಶ್ರಾವಸ್ತಿ ಮೂಲದ ರಿಂಕು (27) ಎಂದು ಗುರುತಿಸಲಾಗಿದೆ. ಇವರಿಬ್ಬರಿಗೂ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಅದು ಪ್ರೇಮಕ್ಕೆ ತಿರುಗಿತ್ತು. ಕೆಲ ದಿನಗಳ ಹಿಂದೆ ರಿಂಕು, ಪಿಂಕಿಯನ್ನು ನೋಯ್ಡಾದಿಂದ ಬಹ್ರೈಚ್‌ಗೆ ಕರೆತಂದಿದ್ದನು. ಸೆಪ್ಟೆಂಬರ್ 22 ರಂದು ಇಬ್ಬರೂ ದಂಪತಿ ಎಂದು ಹೇಳಿಕೊಂಡು ಸ್ಥಳೀಯ ಹೋಟೆಲ್‌ನಲ್ಲಿ ಕೊಠಡಿ ಪಡೆದುಕೊಂಡಿದ್ದರು. ಈ ಮಧ್ಯೆ, ರಿಂಕು ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಪಿಂಕಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.
ಗುರುವಾರ ಬೆಳಗ್ಗೆಯಿಂದ ಕೊಠಡಿಯಿಂದ ಯಾವುದೇ ಸದ್ದು ಅಥವಾ ಚಲನವಲನ ಬಾರದಿದ್ದಾಗ, ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಸಂಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿ ಕೊಠಡಿಯ ಬಾಗಿಲು ತೆರೆದಾಗ ಇಬ್ಬರೂ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಎಫ್‌ಎಸ್‌ಎಲ್ (FSL) ವಿಧಿವಿಜ್ಞಾನ ತಂಡ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತೋರುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರ ಮೊಬೈಲ್ ಕರೆ ವಿವರಗಳು ಹಾಗೂ ಕುಟುಂಬಸ್ಥರ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.






