ಇತರೆ

ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು 

Views: 28

ಕನ್ನಡ ಕರಾವಳಿ ಸುದ್ದಿ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಸಮೀಪ ಸಂಭವಿಸಿದೆ. ಮೃತರೆಲ್ಲರೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮೂಲದವರೆಂದು ತಿಳಿದುಬಂದಿದೆ.

ಮಂಗಳವಾರ ಸಂಜೆ ಕೆ.ಆರ್. ಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಸರಕು ಸಾಗಣೆ ಲಾರಿಯ ಟೈರ್ ದಿಢೀರನೆ ಸಿಡಿದಿದೆ. ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯು ಹೆದ್ದಾರಿಯ ಎಡಭಾಗಕ್ಕೆ ತಿರುಗಿ ಅಡ್ಡಲಾಗಿ ನಿಂತಿದೆ. ಇದೇ ವೇಳೆ ಲಾರಿಯ ಹಿಂದೆಯೇ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಹಾಗೂ ಮಂಜುನಾಥ್ (22) ಎಂಬ ಯುವಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಬಸವರಾಜ್ (21) ಎಂಬಾತನನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿದ ತಕ್ಷಣ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!